ಕೊಪ್ಪಳ,ಜೂ.27- ಲಾರಿಯೊಂದು ರಸ್ತೆ ವಿಭಜಕ ದಾಟಿ ಎದುರಿಗೆ ಬಂದು ಮಂತ್ರಾಲಯಕ್ಕೆ ತೆರಳುತ್ತಿದ್ದ ಯಾತ್ರಿಕರಿದ್ದ ಓಮ್ನಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದು, ಮೂರು ಮಕ್ಕಳು ಸೇರಿದಂತೆ ನಾಲ್ಕು ಮಂದಿ ಗಾಯಗೊಂಡಿರುವ ದಾರುಣ ಘಟನೆ ಜಿಲ್ಲೆಯ ಭಾನಾಪುರ ಸಮೀಪ ಇಂದು ಮುಂಜಾನೆ ನಡೆದಿದೆ.
ಕುಕನೂರು ತಾಲ್ಲೂಕಿನ ಭಾನಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಇಂದು ಮುಂಜಾನೆ 1.30ರ ಸುಮಾರಿನಲ್ಲಿ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಘಾತದಲ್ಲಿ ಮೃತಪಟ್ಟವರನ್ನು ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45)ಪ್ರವೀಣ್ (23) ಮತ್ತು ಚಿನಯ್ (16) ಎಂದು ಗುರುತಿಸಲಾಗಿದೆ.
ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಬ್ಬಾರ ಗ್ರಾಮದ ನಿವಾಸಿಗಳಾಗಿದ್ದು, ಆಂಧ್ರಪ್ರದೇಶದ ಪವಿತ್ರ ಕ್ಷೇತ್ರ ಮಂತ್ರಾಲಯಕ್ಕೆ ಯಾತ್ರೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ನಿಯಂತ್ರಣ ತಪ್ಪಿದ ಲಾರಿಯು ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಓಮ್ನಿಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.
ಓಮ್ನಿಯಲ್ಲಿ 9 ಮಂದಿ ಇದ್ದರು. ಇವರಲ್ಲಿ ಐವರು ಮೃತಪಟ್ಟಿದ್ದು ಮೂವರು ಮಕ್ಕಳು ಸೇರಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.ಗಾಯಾಳುಗಳನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಕುಕನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
