ಬೆಂಗಳೂರು,ಮಾ.6- ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು, 1ರಿಂದ 10ನೇ ತರಗತಿವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.
ವಿಧಾನಸಭೆಯಲ್ಲಿ 2026-27ನೇ ಬಜೆಟ್ ಮಂಡಿಸಿದ ಅವರು, ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ವಿಶೇಷವಾಗಿ ದಾಖಲಾತಿ ಪ್ರಮಾಣ ಮತ್ತು ಕಲಿಕೆಯ ಫಲಿತಾಂಶಗಳನ್ನು ಹೆಚ್ಚಿಸಲು ನಮ ಸರ್ಕಾರ ಬದ್ಧವಾಗಿದೆ. ಈಗಾಗಲೇ 1ರಿಂದ ತರಗತಿಯವರೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. ಇದರ ಜೊತೆಗೆ ಇನ್ನು ಮುಂದೆ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡುತ್ತೇವೆ ಎಂದು ಘೋಷಿಸಿದರು.
ಉತ್ತಮ ಕಲಿಕೆ ಉಜ್ವಲ ಭವಿಷ್ಯ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ಎಡಿಬಿ 500 ಶಾಲೆಗಳು, ಕೆಕೆಆರ್‌ಡಿಬಿ ನಿಧಿಯಿಂದ 200 ಶಾಲೆಗಳು ಹಾಗೂ ಕೆಎಂಇಆರ್‌ಸಿ ನಿಧಿಯಿಂದ 100 ಶಾಲೆಗಳು, ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ವರ್ಷಗಳಲ್ಲಿ ವೆಚ್ಚ ಮಾಡಲಾಗುವುದು ಎಂದು ತಿಳಿಸಿದರು.
ಶಾಲಾ ಶಿಕ್ಷಣ 2025-26ನೇ ಸಾಲಿನ ಆಯವ್ಯಯದಲ್ಲಿ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ. ಖಾಸಗಿ ಶಾಲೆಗಳ ಮಾನ್ಯತೆ ಹಾಗೂ ನವೀಕರಿಸುವ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಸಲು ಅನುಮತಿಸಿ ಸರಳೀಕರಣಗೊಳಿಸಲಾಗಿದೆ ಎಂದರು.
ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ.ಗಳು, ನಿರ್ಮಾಣಕ್ಕಾಗಿ 75 ಕೋಟಿ ರೂ.ಗಳು ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಸದರಿ ಅನುದಾನವನ್ನು ಶಾಲಾ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ನೇರವಾಗಿ ವರ್ಗಾಯಿಸಲಾಗುವುದು. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಾಮರ್ಥ್ಯ ವೃದ್ಧಿಗಾಗಿ ಭಾಷಾ ತರಬೇತಿ ಕಾರ್ಯಕ್ರಮವನ್ನು 24 ಕೋಟಿ ರೂ. ವೆಚ್ಚದಲ್ಲಿ ಹಮಿಕೊಳ್ಳಲಾಗುವುದು ಎಂದರು.
ಐಐಟಿ ಧಾರವಾಡದ ಸಹಯೋಗದಲ್ಲಿ 8ರಿಂದ 12ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆಯಲ್ಲಿ ಂ ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯವನ್ನು ಒದಗಿಸಲಾಗುವುದು. 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಃಖಅ ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುವುದು. ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಆಶ್ವಾಸನೆ ನೀಡಿದರ.
ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ನಿಷೇಧಿಸಲಾಗುವುದು. ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಸಿದರು.
