ಬೆಂಗಳೂರು, ಸೆ.16- ಗಣೇಶ ಮೂರ್ತಿ ಮೆರವಣಿಗೆ, ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕೆಂದು ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ಅವರು ನಗರದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗೆ ಆದೇಶಿಸಿದ್ದಾರೆ.
ಗಣೇಶ ಮೂರ್ತಿ ವಿಸರ್ಜನಾ ಸ್ಥಳಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಅತ್ಯಂತ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸುವಂತೆ ಆಯುಕ್ತರು ಸೂಚಿಸಿದ್ದಾರೆ.ಗಣೇಶ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಪ್ರತಿಯೊಂದು ವಿಷಯಕ್ಕೂ ಮಹತ್ವ ನೀಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ನಡೆಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಹಾಗೂ ಗಣೇಶ ಮೂರ್ತಿ ಪ್ರತಿಷ್ಠಾಪನಾ ಆಯೋಜಕರು ಮತ್ತು ಮುಖಂಡರೊಂದಿಗೆ ನಿರಂತರ ಸಮನ್ವಯ ಸಾಧಿಸಬೇಕು. ಯಾವುದೇ ಅಗತ್ಯ ಮಾಹಿತಿ ದೊರೆತಲ್ಲಿ ತಕ್ಷಣ ತಮ್ಮ ಗಮನಕ್ಕೆ ತರುವಂತೆ ಅವರು ಸಲಹೆ ನೀಡಿದ್ದಾರೆ. ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಮತ್ತು ಸಿಬ್ಬಂದಿ ಕರ್ತವ್ಯದಲ್ಲಿ ಸದಾ ಸಕ್ರಿಯರಾಗಿ ಕಾರ್ಯನಿರ್ವಹಿಸಬೇಕು. ಅವರಿಗೆ ಅಗತ್ಯ ಆಹಾರ ವ್ಯವಸ್ಥೆ ಮಾಡಬೇಕು ಎಂದು ಅವರು ಹೇಳಿದರು.
ಮೆರವಣಿಗೆ ಸೇರಿದಂತೆ ಪ್ರಮುಖ ಸಂದರ್ಭಗಳಲ್ಲಿ ನೇತ್ರ ಕ್ಯಾಮೆರಾ ಹಾಗೂ ಮ್ಯಾಜಿಕ್ ಬಾಕ್ಸ್ ಕ್ಯಾಮೆರಾ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಬೇಕು. ಕೆಎಸ್‌ಆರ್‌ಪಿ ತುಕಡಿಗಳಿಗೆ ಸರಿಯಾದ ಮಾರ್ಗದರ್ಶನ ನೀಡಿ, ಅಗತ್ಯ ಸ್ಥಳಗಳಲ್ಲಿ ನಿಯೋಜಿಸುವುದರ ಜೊತೆಗೆ ರೂಟ್ ಮಾರ್ಚ್ ನಡೆಸಿ ಪೊಲೀಸ್ ಗಸ್ತು ಹೆಚ್ಚಿಸಬೇಕೆಂದು ಅವರು ಸೂಚನೆ ನೀಡಿದರು.
ಗಣಪತಿ ಮೆರವಣಿಗೆ ಆಯೋಜಕರು ನಿಗದಿತ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು. ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಮತ್ತು ಸಿಬ್ಬಂದಿ ಮುಂಚಿತವಾಗಿಯೇ ತಮ್ಮ ನಿಯೋಜಿತ ಸ್ಥಳ ಹಾಗೂ ಮೆರವಣಿಗೆ ಮಾರ್ಗವನ್ನು ಪರಿಶೀಲಿಸಿಕೊಳ್ಳುವುದರ ಜೊತೆಗೆ ಸ್ಥಳೀಯ ಪರಿಸ್ಥಿತಿಯ ಬಗ್ಗೆ ಸಂಪೂರ್ಣ ಅರಿವು ಹೊಂದಿರಬೇಕು ಎಂದು ಅವರು ಹೇಳಿದರು.
ಸಾರ್ವಜನಿಕರು, ಹಬ್ಬದ ಆಯೋಜಕರು ಹಾಗೂ ಪೊಲೀಸ್ ಇಲಾಖೆ ನಡುವಿನ ಉತ್ತಮ ಸಮನ್ವಯದೊಂದಿಗೆ ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳಗಳಲ್ಲಿ ಶಾಂತಿಯುತವಾಗಿ, ಸುರಕ್ಷಿತವಾಗಿ ಹಾಗೂ ಸೌಹಾರ್ದತೆಯಿಂದ ಆಚರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆಯುಕ್ತರು ಸೂಚನೆ ನೀಡಿದರು. ಈಶಾನ್ಯ ವಿಭಾಗದ ಡಿಸಿಪಿ ಕಚೇರಿಯಲ್ಲಿ ಆಯುಕ್ತರು ಸಭೆ ನಡೆಸಿ, ಕೆಲವು ಸಲಹೆ-ಸೂಚನೆಗಳನ್ನು ನೀಡಿದ್ದಾರೆ.
