ಬೆಂಗಳೂರು,ಜು.23- ಜಿಬಿಎ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ದಬ್ಬಾಳಿಕೆ ನಡೆಸಿದ್ದ ಪ್ರಮುಖ ಆರೋಪಿ ಬಸವರಾಜ ಪಡುಕೋಟೆ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಈಗಾಗಲೇ ಹಲವಾರು ಠಾಣೆಗಳಲ್ಲಿ 19ಕ್ಕೂ ಹೆಚ್ಚು ಪ್ರಕರಣಗಳು ಈತನ ಮೇಲಿದ್ದು, ಹಫ್ತಾ ವಸೂಲಿ ಸೇರಿದಂತೆ ಹಲವು ಅಪರಾಧಿ ಚಟುವಟಿಕೆಗಳು ಮಿತಿಮೀರಿರುವ ಹಿನ್ನೆಲೆಯಲ್ಲಿ ಕಠಿಣ ಕಾನೂನಿನಡಿ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ.
ಈಗಾಗಲೇ ಅಧಿಕಾರಿಗಳ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ 12 ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಇದರಲ್ಲಿ ಬಸವರಾಜು ಪಡುಕೋಟೆ, ರಘು, ಬಸವರಾಜ್, ಪಾರ್ಥಿಬನ್ ಹಾಗೂ ಪರಶುರಾಮ್ ಅವರನ್ನು 4 ದಿನಗಳ ಮಟ್ಟಿಗೆ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಉಳಿದ 7 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ ಪುಡಿ ರೌಡಿಗಳಿಗೆ ಬುದ್ಧಿ ಕಲಿಸಲು ಮುಂದಾಗಿದ್ದಾರೆ.ಸಚಿವ ಕೃಷ್ಣಭೈರೇಗೌಡ ಹಾಗೂ ಜಿಬಿಎ ನೌಕರರ ಸಂಘ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ. ಪಡುಕೋಟೆ ಮತ್ತು ಪಟಾಲಂ ಯಾರಿಂದ ಹಫ್ತಾ ವಸೂಲಿ ಮಾಡುತ್ತಿತ್ತು ಎಂಬ ಬಗ್ಗೆ ಹಾಗೂ ಇವರ ದಿನನಿತ್ಯದ ದಂಧೆಯ ಬಗ್ಗೆ ವಿಸ್ತೃತ ತನಿಖೆ ನಡೆಸಲಾಗುತ್ತಿದೆ.
