ಬೆಂಗಳೂರು, ಮೇ25- ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಮುಖ ಗ್ಯಾರಂಟಿ ಯೋಜನೆಗ ಳಾದ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ನಿನ್ನೆ ನಡೆದ ಎಸ್ ಐ ಆರ್ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದ್ದು, ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಲು ಸರಕಾರ ಮುಂದಾಗಿದೆ. ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗದಂತೆ, ನಿಜವಾದ ಅರ್ಹ ಬಡ ಜನರಿಗೆ ಮಾತ್ರ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ.
ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆ ಪರಿಷ್ಕರಣೆಗೆ ಸರ್ಕಾರ ನಿರ್ಧರಿಸಿದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 1 ಕೋಟಿ 64 ಲಕ್ಷ ಮಹಿಳೆಯರು 2,000 ರೂ. ಹಣ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಲ್ಲೂ 1 ಕೋಟಿ 67 ಲಕ್ಷ ಫಲಾನುಭವಿಗಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ಅರ್ಹತೆ ಮೀರಿದವರು ಜೊತೆಗೆ ಸತ್ತವರ ಹೆಸರಿನಲ್ಲೂ ಹಣ ಪಡೆಯಲಾಗುತ್ತಿದೆ ಎಂಬ ಮಾಹಿತಿ ಇದೆ. ಗೃಹ ಜ್ಯೋತಿ ಯೋಜನೆಯಲ್ಲೂ ಬಹುತೇಕ ಅರ್ಹತೆ ಮೀರಿದವರು ಫಲಾನುಭವಿಗಳಾಗುತ್ತಿದ್ದಾರೆ ಎನ್ನುವ ಮಾಹಿತಿ ಇದೆ. ಅದೇ ಕಾರಣಕ್ಕೆ ಎರಡು ಯೋಜನೆಯ ಪರಿಷ್ಕರಣೆಗೆ ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಯೋಜನೆಯಲ್ಲಿ ಪಾರದರ್ಶಕತೆ ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ದೊರೆಯುವಂತೆ ಮಾಡುವುದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಣವು ಮೃತಪಟ್ಟವರ ಹೆಸರಿನಲ್ಲಿಯೂ ಸಂದಾಯವಾಗುತ್ತಿರುವ ಹಲವಾರು ಪ್ರಕರಣಗಳು ವರದಿಯಾಗಿವೆ.
ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಾದ ಗೃಹ ಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಲು ತೀರ್ಮಾನಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಬರೋಬ್ಬರಿ 1 ಕೋಟಿ 24 ಲಕ್ಷಕ್ಕೂ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಫಲಾನುಭವಿಗಳ ಪಟ್ಟಿಯಲ್ಲಿ ಹಲವು ತಾಂತ್ರಿಕ ದೋಷಗಳು ಹಾಗೂ ನಿಯಮ ಉಲ್ಲಂಘನೆಗಳು ಪತ್ತೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಇದು ಸರಕಾರಿ ಹಣದ ದುರುಪಯೋಗಕ್ಕೆ ಕಾರಣವಾಗುತ್ತಿದೆ. ಅಲ್ಲದೆ, ತೆರಿಗೆ ಪಾವತಿಸುವವರು ಕೂಡ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈ ಯೋಜನೆಗಳ ಮುಖ್ಯ ಉದ್ದೇಶ ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ನೀಡುವುದಾಗಿದ್ದು, ಹೀಗಾಗಿ ತೆರಿಗೆ ಪಾವತಿಸುವವರನ್ನು ಈ ವ್ಯಾಪ್ತಿಯಿಂದ ಹೊರಗಿಡಲು ಚಿಂತನೆ ನಡೆಸಲಾಗಿದೆ. ಇದಲ್ಲದೆ, ಒಂದೇ ಮನೆಯಲ್ಲಿ ಇಬ್ಬಿಬ್ಬರಿಗೆ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವ ಅಕ್ರಮಗಳು ಸಹ ಬೆಳಕಿಗೆ ಬಂದಿದ್ದು, ಈ ಬಗ್ಗೆಯೂ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಈ ಎಲ್ಲಾ ಅಕ್ರಮಗಳನ್ನು ಮತ್ತು ಅನರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಡುವ ಸಲುವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಮಗ್ರ ಪರಿಶೀಲನೆಗೆ ಚಿಂತನೆ ನಡೆಸಲಾಗಿದೆ. ಇತ್ತೀಚೆಗಷ್ಟೇ ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗೃಹಲಕ್ಷ್ಮಿ ಹಣದಲ್ಲಿ 5,000 ಕೋಟಿ ರೂ. ಹಗರಣ ನಡೆದಿದೆ ಎಂದು ಆರೋಪಿಸಿದ್ದರು.
