ಬೆಂಗಳೂರು, ಮೇ 27-ನೈಋತ್ಯ ಮುಂಗಾರು ಆರಂಭಕ್ಕೂ ಮುನ್ನ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ರಾಜ್ಯದ ಪೂರ್ವ ಭಾಗದ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂನ್ 2ರವರೆಗೂ ಮಳೆ ಮುಂದುವರೆಯಲಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮೇ 29 ಮತ್ತು 30ರಂದು ಯೆಲ್ಲೂ ಅಲರ್ಟ್ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮೇ 30ರವರೆಗೆ ನಾಲ್ಕು ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಿದೆ. ಮೇ 30ರ ನಂತರ ಮಳೆಯ ತೀವ್ರತೆ ಕಡಿಮೆಯಾದರೂ ಚದುರಿದಂತೆ ಅಲ್ಲಲ್ಲಿ ಮಳೆ ಮುಂದುವರೆಯಲಿದೆ.ಮುಂಗಾರು ಆರಂಭಕ್ಕೆ ಪೂರಕವಾದ ವಾತಾವರಣಗಳು ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಗುಡುಗು, ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳು ಹೆಚ್ಚಾಗಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಆದರೆ, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆಗಳಿಲ್ಲ. ವಾಡಿಕೆ ಪ್ರಮಾಣದ ಮಳೆಯಾಗುವ ಲಕ್ಷಣಗಳಿವೆ.
ನಿನ್ನೆ ಸಂಜೆ ಹಾಗೂ ರಾತ್ರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಸೊಂಗನಹಳ್ಳಿಯಲ್ಲಿ 96 ಮಿ.ಮೀ. ನಷ್ಟು ಭಾರೀ ಮಳೆಯಾಗಿದೆ. ಕಲಬುರಗಿ, ಬೀದರ್, ಹಾಸನ, ತುಮಕೂರು, ಯಾದಗಿರಿ, ಕೋಲಾರ, ಬೆಂಗಳೂರು ನಗರ, ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಉತ್ತಮ ಮಳೆಯಾಗಿದೆ.
ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಆದರೆ, ಬೇಸಿಗೆ ಬೆಳೆಯ ರಾಗಿ, ಬತ್ತ ಕೊಯ್ಲಿಗೆ ಮಳೆಯಿಂದ ತೊಂದರೆಯಾಗಿದೆ. ಹಲವೆಡೆ ಆಲಿಕಲ್ಲು ಸಹಿತ ಗಾಳಿ ಮಳೆಗೆ ಮಾವು,ಬಾಳೆ, ಟೊಮಾಟೋ ಸೇರಿದಂತೆ ಹಲವು ಬೆಳಿಗಳು ಹಾನಿಗೀಡಾಗಿವೆ.
