ಬೆಂಗಳೂರು,ಜೂ.7- ನೈಋತ್ಯ ಮುಂಗಾರು ಚೇತರಿಸಿಕೊಂಡಿದ್ದು ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೇವಲ ಎರಡು ದಿನಗಳಲ್ಲೇ ಮುಂಗಾರು ರಾಜ್ಯಾದ್ಯಂತ ವ್ಯಾಪಿಸಿದೆ. ನಿನ್ನೆ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
ಕರಾವಳಿ ಭಾಗದಲ್ಲಿ ವ್ಯಾಪಕ ಹಾಗೂ ಭಾರೀ ಮಳೆಯಾಗುತಿದ್ದುಘಿ, ಇನ್ನು ಮೂರು ದಿನ ಮುಂದುವರೆಯುವ ಸಾಧ್ಯತೆಗಳಿವೆ. ರಾಜ್ಯಾದ್ಯಂತ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಸಾರ್ವಜನಿಕರು ಹಾಗೂ ಮೀನುಗಾರರು ಸೂಚನೆಗಳನ್ನು ಪಾಲಿಸಬೇಕೆಂದು ವಿನಂತಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ಮುಂದಿನ 24ರಿಂದ 48 ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಮುಂಗಾರು ಚುರುಕಾಗಿರುವುದರಿಂದ ಜೂನ್ 12ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ಈ ಭಾಗಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಮಲೆನಾಡು ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನದಿಗಳ ನೀರಿನ ಮಟ್ಟ ಏರಿಕೆ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಲಾಗಿದೆ.ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮುಂಗಾರು ಪ್ರಭಾವ ಹೆಚ್ಚಾಗಿದ್ದು, ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಬಲವಾದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ.
ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇದೇ ವೇಳೆ ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ಇನ್ನು ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲೂ ಬಿರುಗಾಳಿ ಸಹಿತ ಮಳೆಯ ಆರ್ಭಟ ಮುಂದುವರಿಯಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಇನ್ನುಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಬೆಂಗಳೂರು ದಕ್ಷಿಣ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ. ರಾಜ್ಯದಾದ್ಯಂತ ಗುಡುಗು ಮತ್ತು ಮಿಂಚಿನ ಅಬ್ಬರ ಇರುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದ ವೀಕ್ಷಣಾಲಯ ಕೇಂದ್ರದಲ್ಲಿ 9 ಸೆಂಟಿಮೀಟರ್‌ನಷ್ಟು ಮಳೆ ಸುರಿದಿದೆ. ರಾಯಚೂರು ಜಿಲ್ಲೆಯ ಕುರ್ಡಿ 6 ಸೆಂಟಿಮೀಟರ್, ದಕ್ಷಿಣ ಕನ್ನಡ ಜಿಲ್ಲೆಯ ಶಕ್ತಿನಗರದಲ್ಲಿ 5 ಸೆಂಟಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಯಾದಗಿರಿ ಜಿಲ್ಲೆಯ ಕಕ್ಕೇರಿ 4, ಬೆಳಗಾವಿಯ ಅಥಣಿ, ದಕ್ಷಿಣ ಕನ್ನಡದ ಧರ್ಮಸ್ಥಳ ಮತ್ತು ಮೂಡುಬಿದಿರೆ, ವಿಜಯಪುರದ ಇಂಡಿ, ಉತ್ತರ ಕನ್ನಡದ ಕಾರವಾರ, ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ ನಗರ ಮತ್ತು ಸಿದ್ದಾಪುರ, ರಾಯಚೂರಿನ ಲಿಂಗಸಗೂರು, ಗದಗ ಜಿಲ್ಲೆಯ ಶಿರಹಟ್ಟಿ ಹಾಗೂ ಕೊಪ್ಪಳದ ಯಲಬುರ್ಗಾ ವ್ಯಾಪ್ತಿಯಲ್ಲಿ ತಲಾ 3 ಸೆಂ.ಮೀನಷ್ಟು ಮಳೆಯಾಗಿದೆ.
