ಬೆಂಗಳೂರು,ನ.20- ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಎನ್ಡಿಎ ಅಭ್ಯರ್ಥಿ ಆಯ್ಕೆ ಸದ್ಯದಲ್ಲೇ ಅಂತಿಮಗೊಳ್ಳಲಿದೆ.ಅಭ್ಯರ್ಥಿ ಆಯ್ಕೆ ಸಂಬಂಧ ಜೆಡಿಎಸ್-ಬಿಜೆಪಿ ನಾಯಕರು ಸಮಾಲೋಚನೆ ನಡೆಸಿದ್ದು, ಒಮತದ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.
ಹಿರಿಯೂರು ಉಪ ಚುನಾವಣೆ ಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ರಾಜ್ಯ ಬಿಜೆಪಿ ಉತ್ಸುಕವಾಗಿದೆ. ಅದೇ ರೀತಿ ಸ್ಥಳೀಯ ಜೆಡಿಎಸ್ ನಾಯಕರು ಕೂಡಾ ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬ ಒತ್ತಡವನ್ನು ಪಕ್ಷದ ವರಿಷ್ಠರ ಮೇಲೆ ಹೇರುತ್ತಿ ದ್ದಾರೆ. ಉಭಯ ಪಕ್ಷಗಳಲ್ಲೂ ಪ್ರತ್ಯೇಕವಾಗಿ ಉಪಚುನಾವಣೆ ಸಿದ್ಧತೆ, ಅಭ್ಯರ್ಥಿ ಆಯ್ಕೆ ಕುರಿತಂತೆ ಸಭೆಗಳನ್ನು ನಡೆಸಿ ಸ್ಥಳೀಯ ಕಾರ್ಯಕರ್ತರ, ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿವೆ.
ಉಭಯ ಪಕ್ಷಗಳ ನಾಯಕರು ಒಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಎರಡೂ ಪಕ್ಷಗಳಲ್ಲೂ ಸ್ಪರ್ಧೆಗಿಳಿಯಲು ಆಕಾಂಕ್ಷಿಗಳ ಪೈಪೋಟಿ ಇರುವುದು ಸ್ಪಷ್ಟವಾಗಿದೆ.
ಇತ್ತೀಚೆಗೆ ನಡೆದ ವಿಧಾನ ಪರಿಷತ್ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್ಗೆ ಭಾರೀ ಹಿನ್ನಡೆ ಯಾಗಿತ್ತು. ಗೆಲುವಿನ ಸಂಭ್ರಮ ದಲ್ಲಿರುವ ಉಭಯ ಪಕ್ಷಗಳು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾತುರವಾಗಿವೆ. ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರು ಹಿರಿಯೂರು ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ಸಂಬಂಧ ಸ್ಥಳೀಯ ಮುಖಂಡರ ಸಭೆಯನ್ನು ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ.
ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದ ದೇವೇಂದ್ರಪ್ಪ ಅವರನ್ನೇ ಕಣಕ್ಕಿಳಿಸಬೇಕೆಂದು ಮುಖಂಡರು ಕುಮಾರಸ್ವಾಮಿಯವರನ್ನು ಒತ್ತಾಯಿಸಿದ್ದಾರೆ. ಈ ನಡುವೆ ಕುಮಾರಸ್ವಾಮಿ ಯವರು ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯ ಬೆಳವಣಿಗೆಯ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದ್ದಾರೆ.
ಅಲ್ಲದೆ ಹಿರಿಯೂರು ವಿಧಾನಸಭೆ ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ಸಂಬಂಧ ಬಗ್ಗೆಯೂ ಅಮಿತ್ ಶಾ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.ಮೈತ್ರಿಕೂಟವನ್ನು ರಾಜ್ಯದಲ್ಲಿ ಮತ್ತಷ್ಟು ಬಲಪಡಿಸಿ ಮುಂದಿನ ಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಪಡೆಯಲು ಅನುಕೂಲವಾಗುವಂತೆ ಕಾರ್ಯ ನಿರ್ವಹಿಸಲು ಶಾ ಅವರು ಮಾರ್ಗದರ್ಶನ ನೀಡಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
