ಬೆಂಗಳೂರು: ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್‌ಟೇಬಲ್ (CAR/ DAR) ಹುದ್ದೆಗಳಿಗೆ ಸೆ.6ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೇವಲ ಐದು ದಿನಗಳಲ್ಲಿಯೇ ಪ್ರಕಟಿಸಿ ದಾಖಲೆ ಬರೆದಿದೆ.
ಈ ಫಲಿತಾಂಶಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಸೆ.14ರಂದು ಸಂಜೆ 5.30ರೊಳಗೆ ನಿಗದಿತ ಲಿಂಕ್ (https://cetonline.Karnataka.in/kea/) ಮೂಲಕ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷೆ ನಡೆದ ದಿನವೇ ಅಭ್ಯರ್ಥಿಗಳ ಒಎಂಆರ್ ಪ್ರತಿಗಳನ್ನು ಸ್ಕ್ಯಾನ್ ಮಾಡಿ, ಪರೀಕ್ಷಾ ಕೇಂದ್ರವಾರು ವೆಬ್ ಸೈಟ್ ಗೆ ಅಪ್ ಲೋಡ್ ಮಾಡಲಾಯಿತು. ಸೆ.7ರಂದು ಕೀ ಉತ್ತರ ಬಿಡುಗಡೆ ಮಾಡಿ, ಸೆ.9ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಬಳಿಕ ಸೆ.10ರಂದು ಪರಿಷ್ಕೃತ ಕೀ ಉತ್ತರ ಪ್ರಕಟಿಸಿ, ಇಂದು ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದರು.
