Homeರಾಜ್ಯ65 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ..?

65 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ..?

Kempegowda Award for 65 achievers..?

ಬೆಂಗಳೂರು, ಜು.2- ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸಜ್ಜಾಗಿದೆ.ಮುಂದಿನ ವಾರ ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಜಯಂತಿ ಕಾರ್ಯಕ್ರಮದ ಸಿದ್ಧತೆ ಕುರಿತು ಜಿಬಿಎ ವ್ಯಾಪ್ತಿಯ ಐದು ನಗರಪಾಲಿಕೆಗಳ ಆಯುಕ್ತರು ಸಭೆ ನಡೆಸಿ ಅಂತಿಮ ರೂಪುರೇಷೆಗಳ ಬಗ್ಗೆ ಚರ್ಚಿಸಿದ್ದಾರೆ.

ಮೊದಲ ಬಾರಿಗೆ ಬೆಂಗಳೂರು ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಈ ಬಾರಿ ಜಯಂತಿಯನ್ನು ವೈಭವದಿಂದ ಆಚರಿಸಲು ತೀರ್ಮಾನಿಸಲಾಗಿದೆ. ಸಚಿವರ ಅಧ್ಯಕ್ಷತೆಯಲ್ಲಿ ಐದು ನಗರಪಾಲಿಕೆಗಳ ಆಯುಕ್ತರು ಹಾಗೂ ಜಿಬಿಎ ಮುಖ್ಯ ಆಯುಕ್ತರ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ.

ಜಯಂತಿ ಅಂಗವಾಗಿ ಸ್ವಾಗತ ಸಮಿತಿ, ಜಯಂತಿ ಸಮಿತಿ, ಪ್ರಶಸ್ತಿ ಆಯ್ಕೆ ಸಮಿತಿ, ಹಣಕಾಸು ಸಮಿತಿ, ಸಾಂಸ್ಕೃತಿಕ ಸಮಿತಿ ಸೇರಿದಂತೆ ಹಲವು ಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ಹಂಚಲಾಗಿದೆ.ಪ್ರತಿ ವರ್ಷದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಿ ಸನ್ಮಾನಿಸುವ ಪ್ರಸ್ತಾವವೂ ಇದೆ.

ಈ ಬಾರಿ 65 ಸಾಧಕರಿಗೆ ಪ್ರಶಸ್ತಿ ನೀಡುವ ಕುರಿತು ಚರ್ಚೆ ನಡೆಯುತ್ತಿದ್ದು, ದಕ್ಷಿಣ, ಪಶ್ಚಿಮ ಹಾಗೂ ಕೇಂದ್ರ ನಗರಪಾಲಿಕೆಗಳಿಂದ ತಲಾ 15 ಮಂದಿ, ಉತ್ತರ ಹಾಗೂ ಪೂರ್ವ ನಗರಪಾಲಿಕೆಗಳಿಂದ ತಲಾ 10 ಮಂದಿ ಸಾಧಕರನ್ನು ಆಯ್ಕೆ ಮಾಡುವ ಪ್ರಸ್ತಾವ ಸಮಿತಿ ಮುಂದೆ ಇದೆ.

ಆದರೆ ಜಿಬಿಎ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪ್ರಶಸ್ತಿ ಪುರಸ್ಕೃತರ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವಂತೆ ರಾಜಕೀಯ ಒತ್ತಡವೂ ಇದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈಗಾಗಲೇ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಅಂತಿಮ ಸಂಖ್ಯೆಯಲ್ಲಿ ಬದಲಾವಣೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ, ಇಷ್ಟು ದಿನ ಮೌನವಾಗಿದ್ದ ಸರ್ಕಾರ ಮತ್ತು ಜಿಬಿಎ ಈಗ ಏಕಾಏಕಿ ಕೆಂಪೇಗೌಡ ಜಯಂತಿಗೆ ಹೆಚ್ಚಿನ ಮಹತ್ವ ನೀಡುತ್ತಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಜಯಂತಿ ಆಚರಣೆ ಮತ್ತು ಪ್ರಶಸ್ತಿ ಪ್ರದಾನವು ಸಾಂಸ್ಕೃತಿಕ ಗೌರವದ ಭಾಗವೇ, ಅಥವಾ ಚುನಾವಣೆ ಪೂರ್ವ ರಾಜಕೀಯ ಲೆಕ್ಕಾಚಾರದ ಭಾಗವೇ ಎಂಬ ಪ್ರಶ್ನೆಯೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

RELATED ARTICLES

Latest News