ಬೆಂಗಳೂರು,ಅ.24- ನಾಡಪ್ರಭು ಕೆಂಪೇಗೌಡ ಫೌಂಡೇಷನ್ ವತಿಯಿಂದ ನವದೆಹಲಿಯ ಭಾರತ ಮಂಟಪ ಕನ್ವೆನ್ಷನ್ ಸೆಂಟರ್‌ನಲ್ಲಿ ನಾಡಪ್ರಭು ಕೆಂಪೇಗೌಡರ ದಶಮಾನೋತ್ಸವ ಮತ್ತು ಒಂದೂವರೆ ಶತಮಾನದ ವಂದೇ ಮಾತರಂ ರಾಷ್ಟ್ರೀಯ ಗೀತೆಯ ಸಂಭ್ರಮಾಚರಣೆಯನ್ನು ಹಮಿಕೊಳ್ಳಲಾಗಿದೆ.
ಈ ಐತಿಹಾಸಿಕ ಕಾರ್ಯಕ್ರಮವನ್ನು ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಹಾಗೂ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಾಳೆ ಮಧ್ಯಾಹ್ನ 2 ಗಂಟೆಯಿಂದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಮತ್ತು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ಕಾರ್ಯಕ್ರಮ ಹಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಾವಿರಾರು ದೆಹಲಿ ಕನ್ನಡಿಗರು ಒಟ್ಟಾಗಿ ಸೇರಿ 150 ವರ್ಷಗಳ ಇತಿಹಾಸವಿರುವ ವಂದೇ ಮಾತರಂ ರಾಷ್ಟ್ರೀಯ ಗೀತೆಯನ್ನು ಹಾಡುವ ಮೂಲಕ ರಾಷ್ಟ್ರಭಕ್ತಿಯನ್ನು ಮೆರೆಯಲಿದ್ದಾರೆ ಎಂದು ಫೌಂಡೆಷನ್‌ನ ಸಂಸ್ಥಾಪಕ ಅಧ್ಯಕ್ಷ ಸಿ.ಎಂ. ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿ ಡಾ. ಚಿದಾನಂದಮೂರ್ತಿ ಅವರು ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಗಜೇಂದ್ರ ಸಿಂಗ್ ಶೇಖಾವತ್, ಹೆಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ , ಸಂಸದರಾದ ಡಾ. ಸಿ.ಎನ್. ಮಂಜುನಾಥ್, ಮಲ್ಲೇಶ್ ಬಾಬು ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
