ಬೆಂಗಳೂರು, ಸೆ.4- ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿಯು ಪ್ರಯಾಣಿಕರ ಅನುಕೂಲಕ್ಕಾಗಿ 2,400 ಹೆಚ್ಚುವರಿ ವಿಶೇಷ ಬಸ್ ಸೇವೆಗಳನ್ನು ಕಲ್ಪಿಸಲಿದೆ.ಸೆ.14ರಂದು ಗೌರಿ-ಗಣೇಶ ಹಬ್ಬ ಹಾಗೂ ಸೆ.12 ಮತ್ತು 13ರಂದು ವಾರಾಂತ್ಯದ ದಿನಗಳಾಗಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಸೆ.11ರಿಂದ 13ರವರೆಗೆ ಬೆಂಗಳೂರಿನಿಂದ ರಾಜ್ಯದ ಹಾಗೂ ಅಂತರರಾಜ್ಯದ ವಿವಿಧ ಸ್ಥಳಗಳಿಗೆ 2,400 ಹೆಚ್ಚುವರಿ ಬಸ್ಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಸೆ.14ರಂದು ಆಯಾ ಸ್ಥಳಗಳಿಂದ ಬೆಂಗಳೂರಿಗೆ ಮರಳಲು ವಿಶೇಷ ಬಸ್ ಸೇವೆಗಳನ್ನು ಒದಗಿಸಲಾಗುವುದು.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಸೇರಿದಂತೆ ವಿವಿಧ ಸ್ಥಳಗಳಿಗೆ ವಿಶೇಷ ಬಸ್ ಸೇವೆ ಇರಲಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಹಾಗೂ ಮಡಿಕೇರಿ ಮಾರ್ಗಗಳಿಗೆ ವಿಶೇಷ ಬಸ್ ಸೇವೆ ಕಲ್ಪಿಸಲಾಗುವುದು.ತಮಿಳುನಾಡು ಮತ್ತು ಕೇರಳದ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕೋಯಿಕ್ಕೋಡ್ ಸೇರಿದಂತೆ ವಿವಿಧ ಸ್ಥಳಗಳಿಗೆ ಶಾಂತಿನಗರದಲ್ಲಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ವಿಶೇಷ ಬಸ್ ಸೇವೆ ಒದಗಿಸಲಾಗುವುದು.
ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದರೆ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ ಪ್ರಯಾಣದ ದರದಲ್ಲಿ ಶೇ.10ರಷ್ಟು ರಿಯಾಯಿತಿ ದೊರೆಯಲಿದೆ.
ಕರ್ನಾಟಕ ಸೇರಿದಂತೆ ನೆರೆಯ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನ ಕಾಯ್ದಿರಿಸುವ ಕೌಂಟರ್ಗಳಿದ್ದು, ಅಲ್ಲಿಯೂ ನಿಗಮದ ಸಾರಿಗೆಗಳಿಗೆ ಮುಂಗಡವಾಗಿ ಆಸನ ಕಾಯ್ದಿರಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಕೆಎಸ್ಆರ್ಟಿಸಿ ಅಧಿಕೃತ ವೆಬ್ಸೈಟ್ ಸಂಪರ್ಕಿಸಬಹುದು.
