Homeರಾಜ್ಯವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ.ಪ್ರಾಣೇಶ್‌ ಸದಸ್ಯತ್ವ ರದ್ದು

ವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ.ಪ್ರಾಣೇಶ್‌ ಸದಸ್ಯತ್ವ ರದ್ದು

Legislative Council Deputy Speaker M.K. Pranesh's membership cancelled

ನವದೆಹಲಿ, ಜು.16- ಕರ್ನಾಟಕ ವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ.ಪ್ರಾಣೇಶ್‌ ಅವರಿಗೆ ಹಿನ್ನಡೆಯಾಗಿದ್ದು, ಅವರ ವಿಧಾನ ಪರಿಷತ್‌ ಸದಸ್ಯತ್ವ ರದ್ದತಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಹಾಗೂ ನ್ಯಾಯಮೂರ್ತಿಗಳಾದ ಜಾಯ್‌ ಮಲ್ಯ ಬಾಗ್ಚಿ ಮತ್ತು ವಿಪುಲ್‌ ಎಂ.ಪಂಚೋಲಿ ಅವರನ್ನೊಳಗೊಂಡ ಪೀಠವು ಈ ತೀರ್ಪನ್ನು ನೀಡಿತು.

2021ರ ವಿಧಾನ ಪರಿಷತ್‌ ಚುನಾವಣೆಯಲ್ಲಿ ಮತಗಳ ಮರು ಎಣಿಕೆಗೆ ಆದೇಶಿಸಿದ್ದ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಪ್ರಾಣೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿತು. ಇದರಿಂದ ಅವರ ರಾಜಕೀಯ ನಡೆಗೆ ಕಾನೂನಾತಕ ಹೊಡೆತ ಬಿದ್ದಿದೆ.

ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್‌ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಾಣೇಶ್‌ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಪ್ರಾಣೇಶ್‌ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಗಾಯತ್ರಿ ಶಾಂತೇಗೌಡ ಮೇಲುಗೈ ಸಾಧಿಸಿದ್ದಾರೆ.

ಗಾಯತ್ರಿ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ, ಪ್ರಾಣೇಶ್‌ ಆಯ್ಕೆಯಾಗಿ ನಾಲ್ಕು ವರ್ಷಗಳು ಈಗಾಗಲೇ ಕಳೆದಿವೆ. ಅವರು ಅಧಿಕಾರದ ಸುಖ ಅನುಭವಿಸುತ್ತಿದ್ದಾರೆ. ಇದು ಸರಿಯಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ (ಬಿಜೆಪಿ) ನಾಮನಿರ್ದೇಶನಗೊಂಡ ಸದಸ್ಯರು ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲೂ ನಾಮನಿರ್ದೇಶಿತ ಸಂಸದರಿಗೆ ಮತದಾನದ ಹಕ್ಕು ಇಲ್ಲ. ಆದರೆ, ವಿಧಾನ ಪರಿಷತ್‌ ಚುನಾವಣೆಯಲ್ಲಿ ನಿಯಮಬಾಹಿರವಾಗಿ ಮತದಾನದ ಹಕ್ಕು ನೀಡಲಾಗಿದೆೞ ಎಂಬುದನ್ನು ಪೀಠದ ಗಮನಕ್ಕೆ ತಂದಿದ್ದರು.

ಪ್ರಾಣೇಶ್‌ ಪರ ವಾದ ಮಂಡಿಸಿದ್ದ ವಕೀಲರು, ಪರಿಷತ್‌ ಚುನಾವಣೆಯ ಫಲಿತಾಂಶ ಪ್ರಕಟವಾಗುವ ವರೆಗೆ ಎದುರಾಳಿ ಅಭ್ಯರ್ಥಿ ಯಾವುದೇ ತಕರಾರು ಎತ್ತಿರಲಿಲ್ಲ. ಮತದಾರರ ಪಟ್ಟಿ ಬಗ್ಗೆ ಆಕ್ಷೇಪಣೆಗಳಿದ್ದರೆ ಕೂಡಲೇ ಆಕ್ಷೇಪಣೆ ಸಲ್ಲಿಸಬೇಕಿತ್ತು. ಚುನಾವಣೆಯಲ್ಲಿ ಸೋತ ಬಳಿಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಹೈಕೋರ್ಟ್‌ ಈ ಎಲ್ಲ ಅಂಶಗಳನ್ನು ಪರಿಗಣಿಸದೆಯೇ ತೀರ್ಪು ನೀಡಿದೆ ಎಂದರು.

ಚುನಾವಣಾ ಆಯೋಗದ ಪರ ವಕೀಲರು, ಹೈಕೋರ್ಟ್‌ ತೀರ್ಪು ನೀಡಿದ ಬಳಿಕ ನಾಮನಿರ್ದೇಶಿತ ಸದಸ್ಯರಿಗೆ ಚುನಾವಣೆಯಲ್ಲಿ ಮತದಾನದ ಹಕ್ಕು ನೀಡಿಲ್ಲ. ಈ ಪ್ರಕರಣದಲ್ಲಿ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮೇಲನವಿಯನ್ನೂ ಸಲ್ಲಿಸಿಲ್ಲ. ನ್ಯಾಯಾಲಯದ ತೀರ್ಪನ್ನು ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದರು.

ಪ್ರಕರಣದ ಹಿನ್ನಲೆ :
ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆಯವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು ಹೈಕೋರ್ಟ್‌ 2022ರಲ್ಲಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಾಣೇಶ್‌ ಸುಪ್ರೀಂ ಕೋರ್ಟ್‌ಗೆ ಮೇಲನವಿ ಸಲ್ಲಿಸಿದ್ದರು.

ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನಪರಿಷತ್‌ ಸ್ಥಾನಕ್ಕೆ 2021ರ ಡಿಸೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. ಚಲಾವಣೆಯಾಗಿದ್ದ 2,410 ಮತಗಳ ಪೈಕಿ 39 ಮತಗಳು ಅಸಿಂಧುವಾಗಿದ್ದವು. ಪ್ರಾಣೇಶ್‌ 1,188 ಮತಗಳನ್ನು ಪಡೆದಿದ್ದರು. ಗಾಯತ್ರಿ ಶಾಂತೇಗೌಡ ಅವರು 1,182 ಮತಗಳನ್ನ ಗಳಿಸಿದ್ದರು. ಪ್ರಾಣೇಶ್‌ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು.

ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ, ಮೂಡಿಗೆರೆ ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಅವರಿಗೆ ಮತದಾನ ಮಾಡಲು ಅವಕಾಶ ಇಲ್ಲ ಎಂದು ಗಾಯತ್ರಿ ಶಾಂತೇಗೌಡ ಹೈಕೋರ್ಟ್‌ ಮೆಟ್ಟಿಲೇರಿದ್ದರು.ಸುಪ್ರೀಂ ಕೋರ್ಟ್‌ ಆದೇಶದಂತೆ ಮತಗಳ ಮರು ಎಣಿಕೆ 2025ರ ಫೆಬ್ರುವರಿ 28ರಂದು ಚಿಕ್ಕಮಗಳೂರಿನಲ್ಲಿ ನಡೆದಿತ್ತು. ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ವರದಿ ಸಲ್ಲಿಸಿದ್ದರು.

RELATED ARTICLES

Latest News