ಬೆಂಗಳೂರು, ಫೆ.20-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಚದುರಿದಂತೆ ಕೆಲವೆಡೆ ಮಳೆಯಾಗುವ ಮುನ್ಸೂಚನೆಗಳಿವೆ.
ಇಂದಿನಿಂದ ಭಾನುವಾರದವರೆಗೆ ರಾಜ್ಯದ ಕೆಲವೆಡೆ ಅಕಾಲಿಕ ಹಗುರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ಧಾರೆ.ತಾಪಮಾನ ಏರಿಕೆಯಿಂದಾಗಿ ಸ್ಥಳೀಯವಾಗಿ ಕಡಿಮೆ ಗಾಳಿ ಒತ್ತಡ ವಾತಾವರಣ ಉಂಟಾಗಿ ಬೇಸಿಗೆಯಲ್ಲಿ ಮಳೆಯಾಗುವುದು ಸಹಜ ಪ್ರಕ್ರಿಯೆ. ಆದರೆ, ಚಳಿಗಾಲ ಆರಂಭಕ್ಕೂ ಮುನ್ನವೇ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದೆ.
ಇದರ ಜೊತೆಗೆ ಬಂಗಾಳ ಕೊಲ್ಲಿಯಲ್ಲಿ ಲಘು ವಾಯುಭಾರ ಕುಸಿತವಾಗಿದ್ದು, ತಮಿಳುನಾಡು, ಶ್ರೀಲಂಕಾ ಹಾಗೂ ಅಂಡಮಾನ್ ನಿಕೋಬಾರ್ ದ್ವೀಪದ ಕಡೆಗಳಲ್ಲಿ ಮಳೆ ನಿರೀಕ್ಷಿಸಬಹುದಾಗಿದೆ ಎಂದು ಹವಾಮಾನ ತಜ್ಞ ವಿ.ಎಸ್.ಪ್ರಕಾಶ್ ಹೇಳಿದ್ದಾರೆ.
ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳು ಕಂಡು ಬರುತ್ತಿವೆ. ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದ್ದು, ವ್ಯಾಪಕವಾಗಿ ಎಲ್ಲೆಡೆ ಮಳೆಯಾಗುವುದಿಲ್ಲ. ಅಲ್ಲಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದ್ದಾರೆ.
ಭಾನುವಾರದವರೆಗೂ ಮಳೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. ಫೆಬ್ರವರಿಯ ನಂತರ ಬೇಸಿಗೆ ಮಳೆ ಕೆಲವೆಡೆ ಆಗುವುದು ಸ್ವಾಭಾವಿಕ. ವಾಯುಭಾರ ಕುಸಿತದಿಂದ ತಮಿಳುನಾಡಿನಲ್ಲಿ ಹೆಚ್ಚು ಮಳೆಯಾಗಬಹುದು. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವೆಡೆ ಹಗುರ ಮಳೆ ಇನ್ನೆರಡು ದಿನ ಬೀಳುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.
