Homeರಾಜ್ಯಶರಾವತಿ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್‌ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಮಧು ಬಂಗಾರಪ್ಪ ಸೂಚನೆ

ಶರಾವತಿ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್‌ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಮಧು ಬಂಗಾರಪ್ಪ ಸೂಚನೆ

ಸೊರಬ, ಅ.3- ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಸೊರಬದ ಪ್ರವಾಸಿ ಮಂದಿರದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆ ಕುರಿತು ಅಧಿಕಾರಿಗಳೊಂದಿಗೆ ಅಂತಿಮ ಹಂತದ ಸಭೆ ನಡೆಸಿ ಸಚಿವರು ಮಾತನಾಡಿದರು.

ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಪ್ರಸ್ತಾವನೆಗೆ ಅಗತ್ಯವಿರುವ ಎಲ್ಲ ದಾಖಲೆಗಳು ಹಾಗೂ ಮಾಹಿತಿಯನ್ನು ಸಮಗ್ರವಾಗಿ ಸಿದ್ಧಪಡಿಸಿ, ನಿಯಮಾನುಸಾರ ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡುವ ಪ್ರಕ್ರಿಯೆಯ ಸಂಬಂಧ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಬೇಕಾದ ಅಂಶಗಳು, ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆಯಲ್ಲಿ ಒಳಗೊಂಡಿರಬೇಕಾದ ಅಗತ್ಯ ದಾಖಲೆಗಳು ಹಾಗೂ ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಿತು.

ಸಂತ್ರಸ್ತರ ಬಹುದಿನಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಸ್ತಾವನೆ ಸಿದ್ಧಪಡಿಸುವಾಗ ಯಾವುದೇ ಪ್ರಮುಖ ಅಂಶಗಳು ಅಥವಾ ದಾಖಲೆಗಳು ಬಾಕಿ ಉಳಿಯದಂತೆ ಎಚ್ಚರಿಕೆ ವಹಿಸುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಸಿಸಿಎಫ್‌ ಹನುಮಂತಪ್ಪ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಡಿಎಫ್‌ಒ ಅಜ್ಜಯ್ಯ, ಎಡಿಸಿ ಅಭಿಷೇಕ್‌, ವಕೀಲ ರಮೇಶ್‌ ಹೆಗ್ಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
spot_img

Latest News