ಬೆಂಗಳೂರು, ನ.12- ರಾಜ್ಯದ ತಾಲ್ಲೂಕು ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ಹಾಗೂ ಇತರೆ ಸಿಬ್ಬಂದಿ ತಾವು ಕರ್ತವ್ಯ ನಿರ್ವಹಿಸುವ ಕೇಂದ್ರದ ವ್ಯಾಪ್ತಿಯಲ್ಲಿಯೇ ವಾಸ್ತವ್ಯ ಹೂಡುವುದನ್ನು ಕಡ್ಡಾಯವಾಗಿ ಖಚಿತಪಡಿಸಿಕೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಹತ್ವದ ಸೂಚನೆ ಹೊರಡಿಸಿದೆ.
ವೈದ್ಯರು ಮತ್ತು ಸಿಬ್ಬಂದಿಯ ರಾತ್ರಿ ವೇಳೆಯ ಹಾಜರಾತಿಯನ್ನು ಕರ್ತವ್ಯ ಆ್ಯಪ್ ಮೂಲಕ ದಾಖಲಿಸುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಆದೇಶಿಸಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ನಿನ್ನೆ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಇತರೆ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಮತ್ತು ಸಿಬ್ಬಂದಿಗೆ ಈ ಸೂಚನೆ ಅನ್ವಯವಾಗಲಿದೆ.
ಸರ್ಕಾರದ ಆದೇಶದಂತೆ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ತಮಗೆ ನಿಯೋಜಿಸಿರುವ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕೇಂದ್ರ ಸ್ಥಾನದಲ್ಲಿಯೇ ವಾಸವಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಉದ್ದೇಶದಿಂದ ನವೆಂಬರ್ 1ರಿಂದ ರಾತ್ರಿ ವೇಳೆಯ ಹಾಜರಾತಿಯನ್ನು ಕರ್ತವ್ಯ ಆ್ಯಪ್ ಮೂಲಕ ದಾಖಲಿಸುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ವೈದ್ಯರು ಮತ್ತು ಸಿಬ್ಬಂದಿ ರಾತ್ರಿ ವೇಳೆಯಲ್ಲಿಯೂ ಕೇಂದ್ರ ಸ್ಥಾನದಲ್ಲಿ ಲಭ್ಯವಿರುವುದನ್ನು ಖಚಿತಪಡಿಸಲು ಹಲವು ಕ್ರಮಗಳನ್ನು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಕರ್ತವ್ಯ ಆ್ಯಪ್ ಮೂಲಕ ರಾತ್ರಿ ವೇಳೆಯ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸಬೇಕು. ಕೇಂದ್ರ ಸ್ಥಾನದಲ್ಲಿ ವಾಸವಿರುವುದನ್ನು ದೃಢಪಡಿಸಲು ಸ್ಥಳಾಧಾರಿತ ಹಾಜರಾತಿ ವ್ಯವಸ್ಥೆಯನ್ನು ಬಳಸಬೇಕು. ವೈದ್ಯರು ಮತ್ತು ಸಿಬ್ಬಂದಿಯ ವಾಸ್ತವ್ಯ ಹಾಗೂ ಹಾಜರಾತಿ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು. ಹಾಜರಾತಿ ದಾಖಲಿಸುವ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗದಂತೆ ಮೇಲ್ವಿಚಾರಣೆ ನಡೆಸಬೇಕು ಎಂದು ತಾಕೀತು ಮಾಡಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಆಡಳಿತಾಧಿಕಾರಿಗಳು ಈ ವ್ಯವಸ್ಥೆಯ ಅನುಷ್ಠಾನದ ಜವಾಬ್ದಾರಿ ವಹಿಸಬೇಕು. ವೈದ್ಯರು ಮತ್ತು ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿಯೇ ವಾಸವಿರುವುದನ್ನು ಖಚಿತಪಡಿಸಿಕೊಳ್ಳುವುದರ ಜತೆಗೆ, ರಾತ್ರಿ ವೇಳೆಯ ಹಾಜರಾತಿ ದಾಖಲಿಸುವ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸಬೇಕು ಎಂದು ಸೂಚಿಸಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ರಾತ್ರಿ ವೇಳೆಯಲ್ಲಿ ಲಭ್ಯವಿಲ್ಲ ಎಂಬ ಸಾರ್ವಜನಿಕ ದೂರುಗಳಿಗೆ ಕಡಿವಾಣ ಹಾಕುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ತುರ್ತು ಆರೋಗ್ಯ ಸೇವೆಗಳ ಅಗತ್ಯವಿರುವ ಸಂದರ್ಭದಲ್ಲಿ ಜನರಿಗೆ ಸ್ಥಳೀಯವಾಗಿಯೇ ವೈದ್ಯಕೀಯ ನೆರವು ದೊರೆಯುವಂತೆ ಮಾಡುವುದು ಹಾಗೂ ಸರ್ಕಾರಿ ಆರೋಗ್ಯ ಸೇವೆಗಳ ಹೊಣೆಗಾರಿಕೆಯನ್ನು ಹೆಚ್ಚಿಸುವುದು ಇಲಾಖೆಯ ಆಶಯವಾಗಿದೆ.
