ಬೆಂಗಳೂರು, ನ. 21- ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದೆ. ಹಗಲು-ರಾತ್ರಿ ಎನ್ನದೆ, ಚಳಿ-ಗಾಳಿಯನ್ನೂ ಲೆಕ್ಕಿಸದೆ ನಡುರಸ್ತೆಯಲ್ಲೇ ಕುಳಿತು ಹೋರಾಟ ಮುಂದುವರಿಸಿರುವ ಕಾರ್ಯ ಕರ್ತೆಯರು, ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಆಶಾ ಕಾರ್ಯಕರ್ತೆಯರು ನಗರಕ್ಕೆ ಆಗಮಿಸಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಕಾರ್ಯಕರ್ತೆಯರು ಒಗ್ಗಟ್ಟಿನಿಂದ ಹೋರಾಟಕ್ಕೆ ಧುಮುಕಿರುವುದು ಪ್ರತಿಭಟನೆಯ ತೀವ್ರತೆಯನ್ನು ಹೆಚ್ಚಿಸಿದೆ.
15 ಸಾವಿರ ಗೌರವಧನಕ್ಕೆ ಆಗ್ರಹ:
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ಗೌರವಧನ ನಿಗದಿಪಡಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ. ಆರೋಗ್ಯ ಸೇವೆಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ತಮಗೆ ಸಮರ್ಪಕ ಗೌರವಧನ ನೀಡಬೇಕು ಎಂದು ಕಾರ್ಯಕರ್ತೆಯರು ಒತ್ತಾಯಿಸುತ್ತಿದ್ದಾರೆ.
ಹಗಲು-ರಾತ್ರಿ ಎನ್ನದೆ ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ತೊಡಗಿಸಿಕೊಳ್ಳುವ ಆಶಾ ಕಾರ್ಯಕರ್ತೆಯರು, ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲು ಅಹೋರಾತ್ರಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಚಳಿಯ ನಡುವೆಯೂ ಪ್ರತಿಭಟನಾ ಸ್ಥಳದಲ್ಲೇ ಕುಳಿತು ಹೋರಾಟ ಮುಂದುವರಿಸಿರುವ ಮಹಿಳೆಯರು, ಬೇಡಿಕೆ ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಈಗಾಗಲೇ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದ್ದರೂ ಕಾರ್ಯಕರ್ತೆಯರ ಹೋರಾಟದ ಉತ್ಸಾಹ ಕುಗ್ಗಿಲ್ಲ. ಸರ್ಕಾರದಿಂದ ತಮ್ಮ ಬೇಡಿಕೆಗೆ ಸ್ಪಷ್ಟ ಭರವಸೆ ಹಾಗೂ ಸೂಕ್ತ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ.
ಒಂದೆಡೆ ಚಳಿ, ಗಾಳಿ ಮತ್ತೊಂದೆಡೆ ತಮ್ಮ ಬೇಡಿಕೆ ಈಡೇರಬೇಕೆಂಬ ಹಠದೊಂದಿಗೆ ಪ್ರತಿಭಟನಾಕಾರರು ಧರಣಿ ಮುಂದುವರಿಸಿದ್ದಾರೆ. ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.
