ಕಾರವಾರ,ಜು.5-ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪದ ಮೇಲೆ ಉತ್ತರಕನ್ನಡ ಜಿಲ್ಲೆಯ ಮಂಕಿ ಠಾಣೆಯ ಪಿಎಸ್ಐ ಅಭಿನಂದನ್ ಗೌಡನನ್ನು ಬಂಧಿಸಲಾಗಿದೆ.ಈ ಘಟನೆ ನಾಗರೀಕ ಸಮಾಜವನ್ನೇ ತಲೆತಗ್ಗಿಸುವಂತೆ ಮಾಡಿದ್ದು, ಪೊಲೀಸರ ಮೇಲೆ ಜನರು ಸಂಶಯಪಡುವಂತಾಗಿದೆ.
ಪುಸಲಾಯಿಸಿ ಭಟ್ಕಳಕ್ಕೆ ಕರೆತಂದು ಲಾಡ್್ಜನಲ್ಲಿ ಅತ್ಯಾಚಾರ ವೆಸಗಿದ್ದಾರೆ ಎಂದು 16 ವರ್ಷದ ಸಂತ್ರಸ್ತ ಬಾಲಕಿ ಭಟ್ಕಳ ಠಾಣೆಗೆ ನೀಡಿದ ದೂರಿನ ಮೇರೆಗೆ ಪಿಎಸ್ಐ ಅವರನ್ನು ಬಂಧಿಸಲಾಗಿದೆ. ಬಂಧಿತ ಪಿಎಸ್ಐ ಅಭಿನಂದನ್ ಗೌಡ ಕೆಲವು ತಿಂಗಳ ಹಿಂದೆಯಷ್ಟೇ ಮಂಕಿ ಠಾಣೆಗೆ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಆರೋಪಿಯನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಭಟ್ಕಳ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಈ ಘಟನೆಯು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ರಕ್ಷಕರೇ ಭಕ್ಷಕರಾದರೇ ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಎತ್ತಿದ್ದಾರೆ. ಸಮಾಜದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಅಧಿಕಾರಿಯೇ ಇಂತಹ ಅಮಾನವೀಯ ಕೃತ್ಯದಲ್ಲಿ ಭಾಗಿಯಾಗಿರುವುದು ತೀವ್ರ ಆಘಾತವನ್ನುಂಟು ಮಾಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಇಲಾಖೆಯು ಈ ಪ್ರಕರಣವನ್ನು ಅತೀ ಗಂಭೀರವಾಗಿ ಪರಿಗಣಿಸಿದೆ. ಆರೋಪಿಯ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಂಡು ಯಾವುದೇ ಒತ್ತಡಕ್ಕೂ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಸಂತ್ರಸ್ತ ಬಾಲಕಿಗೆ ಅಗತ್ಯವಾದ ಎಲ್ಲಾ ರೀತಿಯ ಕಾನೂನು ರಕ್ಷಣೆ ಮತ್ತು ಕೌನ್ಸಿಲಿಂಗ್ ಸೌಲಭ್ಯಗಳನ್ನು ಒದಗಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಒತ್ತಾಯಿಸುತ್ತಿವೆ. ಈ ಘಟನೆಯು ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ ತಂದಿದ್ದು, ಇಲಾಖೆಯು ಇಂತಹ ಘಟನೆಗಳನ್ನು ತಡೆಗಟ್ಟಲು ಆಂತರಿಕವಾಗಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂಬುದು ಈಗ ಚರ್ಚೆಯ ವಿಷಯವಾಗಿದೆ.
