ಬೆಂಗಳೂರು,ಮೇ 8- ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಚುನಾಯಿತರಾಗಿರುವ ಕಾಂಗ್ರೆಸ್ ಅಭ್ಯರ್ಥಿಗಳು ಮೇ 11 ರಂದು ವಿಧಾನಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಮಾಜಿ ಸಚಿವ ಎಚ್.ವೈ.ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಉಲ್ಲಪ್ಪ ಮೇಟಿ ಚುನಾಯಿತರಾಗಿದ್ದಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ಚುನಾಯಿತರಾಗಿದ್ದಾರೆ.
ಇವರು ಮೇ 11 ರಂದು ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮೇಳನ ಸಭಾಂಗಣದಲ್ಲಿ ವಿಧಾನಭಾಧ್ಯಕ್ಷ ಯು.ಟಿ.ಖಾದರ್ ಅವರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವಿಧಾನಸಭೆ ಸಚಿವಾಲಯದ ಪ್ರಕಟಣೆ ತಿಳಿಸಿದೆ.
