ಬೆಂಗಳೂರು,ಮೇ 21- ಇದೇ ತಿಂಗಳ 25ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ 26ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ 12 ವರ್ಷ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಪಕ್ಷವು ಆಯೋಜಿಸಿದೆ.
ರಾಷ್ಟ್ರೀಯ ಅಧ್ಯಕ್ಷರಾಗಿ ಮೊದಲ ಬಾರಿಗೆ ಬೆಂಗಳೂರಿಗೆ ನಿತಿನ್ ನಬಿನ್ ಆಗಮಿಸುತ್ತಿದ್ದು, ಯಲಹಂಕ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ಪಕ್ಷದ ಪ್ರಮುಖರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಇದೇ ಸಂದರ್ಭದಲ್ಲಿ ಮೋದಿ ಸರ್ಕಾರವು 26ಕ್ಕೆ 12 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಜಾಗೃತಿ ಹಾಗೂ ಫಲಾನುಭವಿಗಳ ಜೊತೆ ಸಂವಾದ ಸೇರಿದಂತೆ ಹಲವು ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿದೆ.
ಈ ಸಂಬಂಧ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್, ರಾಷ್ಟ್ರೀಯ ಉಪಾಧ್ಯಕ್ಷ ಬೈ.ಜಯಂತ್, ರಾಜ್ಯ ಉಸ್ತುವಾರಿ ಮೋಹನ್ದಾಸ್ ಅಗರ್ವಾಲ್ ಸೇರಿದಂತೆ ಮತ್ತಿತರರು ಪೂರ್ವ ಸಿದ್ಧತಾ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಕಾಡುಗೊಲ್ಲ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಬೆಂಬಲಿಸಿ ಯಾವುದೇ ಅಪೇಕ್ಷೆ ಇಲ್ಲದೆ ಪಕ್ಷಕ್ಕೆ ಬಂದಿದ್ದಾರೆ. ಅವರನ್ನು ಆತೀಯವಾಗಿ ಬರಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸೂಕ್ತವಾದ ಸ್ಥಾನಮಾನ ಸಿಗಲಿದೆ ಎಂದು ಆಶ್ವಾಸನೆ ನೀಡಿದರು.
ರಾಜಣ್ಣ ಹಾಗೂ ಅವರ ಬೆಂಬಲಿಗರು ಬಿಜೆಪಿ ಸೇರಿದ್ದಾರೆ. ಪಕ್ಷದಿಂದ ಅವರಿಗೆ ಖಂಡಿತವಾಗಿ ಒಳ್ಳೆಯದಾಗಲಿದೆ ಎಂದು ಹೇಳಿದರು.ಸಂಸದ ಗೋವಿಂದ ಕಾರಜೋಳ ಮಾತನಾಡಿ, ರಾಜಣ್ಣ ಸೇರ್ಪಡೆ ಆ ಭಾಗದಲ್ಲಿ ನಮಗೆ ಹೆಚ್ಚಿನ ಬಲ ತಂದಿದೆ. ಅವರ ಸ್ಥಾನಮಾನಕ್ಕೆ ತಕ್ಕಂತೆ ಪಕ್ಷವು ನಡೆಸಿಕೊಳ್ಳಲಿದೆ. ಕಾಡುಗೊಲ್ಲ ಸಮುದಾಯಕ್ಕೆ ಬಿಜೆಪಿ ಯಾವಾಗಲೂ ಬೆಂಬಲವಾಗಿಯೇ ನಿಲ್ಲುತ್ತದೆ ಎಂದರು.
