ಬೆಂಗಳೂರು,ಮಾ.29- ಅಡುಗೆ ಅನಿಲದ ಅಭಾವದ ಬಗ್ಗೆ ಜನರು ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೋಟೆಲ್‌ಗಳಿಗೆ ಶೇ.20 ರಷ್ಟು ಅಡುಗೆ ಅನಿಲ ಪೂರೈಸಲಾಗುತ್ತಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಗಳಿಗೆ ಶೇ.100 ರಷ್ಟು ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಪೂರೈಸಲಾಗುತ್ತಿದೆ. ಗೃಹಬಳಕೆಗೆ ನಗರ ಪ್ರದೇಶದಲ್ಲಿ 25 ದಿನಗಳಿಗೆ ಒಂದರಂತೆ ಸಿಲಿಂಡರ್ ನೀಡಲಾಗುವುದು. ಗ್ರಾಮೀಣ ಭಾಗದಲ್ಲಿ 45 ದಿನಗಳಿಗೊಂದು ಸಿಲಿಂಡರ್ ಸರಬರಾಜು ಮಾಡಲಾಗುವುದು ಎಂದು ಹೇಳಿದರು.
ವಾಣಿಜ್ಯ ಬಳಕೆಯ ಅಡುಗೆ ಅನಿಲದ ಸಮಸ್ಯೆ ಇದ್ದು, ಅದನ್ನು ಪರಿಹರಿಸುವ ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಭೆ ಮುಗಿಸಲಾಗಿದೆ. ಜೊತೆಗೆ ಕೇಂದ್ರ ಸಚಿವರೊಂದಿಗೂ ಸಭೆ ಮಾಡಿ ಪರಿಸ್ಥಿತಿ ನಿಭಾಯಿಸುವ ಬಗ್ಗೆ ಚರ್ಚೆಯಾಗಿದೆ ಎಂದರು.
ಮಾ.31 ರಂದು ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಅಂದು ವಾಣಿಜ್ಯ ಸಿಲಿಂಡರ್‌ಗಳ ಬಿಕ್ಕಟ್ಟಿನ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಬಂಕ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿರುವ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
