ಬೆಂಗಳೂರು, ಸೆ.6- ಪೊಲೀಸ್ ಕಾನ್‌ಸ್ಟೇಬಲ್‌ಗಳ (ಸಿಎಆರ್-ಡಿಎಆರ್) ಹುದ್ದೆಗಳ ನೇಮಕಾತಿ ಪರೀಕ್ಷೆ ನಗರದ ಹಲವೆಡೆ ಬಿಗಿ ಭದ್ರತೆಯಲ್ಲಿ ಇಂದು ನಡೆದಿದೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು. ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅಗತ್ಯ ಮಾಹಿತಿ ಹಾಗೂ ಮಾರ್ಗಸೂಚಿಗಳನ್ನು ನೀಡಲಾಗಿತ್ತು.
ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ತಲುಪುವಂತೆ ಹಾಗೂ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಬೆಂಗಳೂರು ಸಂಚಾರ ಪೊಲೀಸರು ಬೆಳಗ್ಗೆಯಿಂದಲೇ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದರು.
ಸುಮಾರು 3,991 ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆ ನಡೆದಿದ್ದು, ಬೆಂಗಳೂರಿನ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭಗೊಂಡಿತು. ಯಾವುದೇ ರೀತಿಯ ಸಮಸ್ಯೆ ಕಂಡುಬಂದಿಲ್ಲ ಎಂದು ಅಧಿಕಾರಿಗಳು ‘ಈ ಸಂಜೆ’ಗೆ ತಿಳಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆ ನಡೆಸಲಾಗುತ್ತಿದೆ.
