ಹುಬ್ಬಳ್ಳಿ, ಜ.7- ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಕೈಬಿಟ್ಟಿದೆ ಎಂದು ಗಲಾಟೆ ಮಾಡಿದ್ದ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಇಲ್ಲಿ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತೆ ಸುಜಾತಾ ಎಂಬುವವರು ಗಾಯಗೊಂಡಿದ್ದು, ಈಗ ಘಟನೆ ಕುರಿತ ವಿಡಿಯೋ ವೈರಲ್ ಆಗಿದೆ.
ಇತ್ತೀಚೆಗೆ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿದ ಅಧಿಕಾರಿಗಳು ಲೋಪವೆಸಗಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತೆಯಾಗಿರುವ ಸುಜಾತಾ ಅವರು ಆಕ್ರೋಶ ವ್ಯಕ್ತಪಡಿಸಿದರು.ನನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಡಿಲಿಟ್ ಮಾಡಲಾಗಿದೆ ಎಂದು ಅವರು ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಕಾಂಗ್ರೆಸ್‌ನ ನಗರಸಭಾ ಸದಸ್ಯೆ ಸುವರ್ಣ ಅವರು ಗಲಾಟೆ ಮಾಡಿದ್ದಾರೆ ಎಂದು ಪ್ರತಿದೂರು ನೀಡಿದ್ದರು.
ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಹಗ್ಗ-ಜಗ್ಗಾಟ ನಡೆದು ದೂರು-ಪ್ರತಿದೂರಿನಿಂದ ಹುಬ್ಬಳ್ಳಿಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.ಈ ನಡುವೆ ಸುಜಾತಾ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಅವರನ್ನು ಪೊಲೀಸರು ಬಂಧಿಸಲು ಮುಂದಾದಾಗ ಹೈಡ್ರಾಮಾ ನಡೆದಿತ್ತು. ಈ ವೇಳೆ ಅವರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.
ಇದು ಸಾಕಷ್ಟು ಟೀಕೆಗೆ ಗುರಿಯಾಗುತ್ತಿದ್ದಂತೆ ಇಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಪೊಲೀಸರು ಯಾವುದೇ ಕಾನೂನು ಉಲ್ಲಂಘನೆ ಮಾಡಿಲ್ಲ. ಸುಜಾತಾ ಅವರೇ ವಿವಸ್ತ್ರಗೊಂಡಿದ್ದಾರೆ ಮತ್ತು ನಮ ಪೊಲೀಸ್ ಸಿಬ್ಬಂದಿಗೆ ಕಚ್ಚಿದ್ದಾರೆ ಎಂದು ಹೇಳಿದ್ದಾರೆ.
ಈ ನಡುವೆ ಅವರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲೂ ಪ್ರಕರಣ ದಾಖಲಾಗಿದೆ. ಇದಕ್ಕಾಗಿ ಅವರನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಸುವರ್ಣ ಮತ್ತು ಸುಜಾತಾ ನಡುವಿನ ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಒಟ್ಟಾರೆ ಹುಬ್ಬಳ್ಳಿಯಲ್ಲಿ ನಡೆದ ಈ ಘಟನೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
