Homeರಾಜ್ಯರಾಜ್ಯದಲ್ಲಿ ಕೈಮಗ್ಗ, ಜವಳಿ ರಫ್ತು ಉತ್ತೇಜನಕ್ಕೆ 2 ಸೌಲಭ್ಯ ಕೇಂದ್ರ ಸ್ಥಾಪನೆಗೆ ಪ್ರಸ್ತಾವನೆ : ರೋಹಿಣಿ...

ರಾಜ್ಯದಲ್ಲಿ ಕೈಮಗ್ಗ, ಜವಳಿ ರಫ್ತು ಉತ್ತೇಜನಕ್ಕೆ 2 ಸೌಲಭ್ಯ ಕೇಂದ್ರ ಸ್ಥಾಪನೆಗೆ ಪ್ರಸ್ತಾವನೆ : ರೋಹಿಣಿ ಸಿಂಧೂರಿ

ಬೆಂಗಳೂರು, ಆ.30– ಕರ್ನಾಟಕದ ಕೈಮಗ್ಗ ಮತ್ತು ಜವಳಿ ಉತ್ಪನ್ನಗಳ ರಫ್ತು ಉತ್ತೇಜನಕ್ಕೆ ರಾಜ್ಯದಲ್ಲಿ ಎರಡು ಟೆಕ್ಸ್‌ಟೈಲ್‌ ಎಕ್ಸ್‌ಪೋರ್ಟ್‌ ಫೆಸಿಲಿಟೇಶನ್‌ ಸೆಂಟರ್‌ಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಂಎಸ್‌ಎಂಇ, ಗಣಿ ಮತ್ತು ಜವಳಿ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ನಗರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕೈಮಗ್ಗ ಮೇಳ-2026ರಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಒಂದು ಹಾಗೂ ದೊಡ್ಡಬಳ್ಳಾಪುರದಲ್ಲಿ ಮತ್ತೊಂದು ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಕುರಿತು ಮುಖ್ಯ ಕಾರ್ಯದರ್ಶಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ರಫ್ತುದಾರರಿಗೆ ಒಂದೇ ವೇದಿಕೆಯಲ್ಲಿ ರಫ್ತು ಪ್ರಕ್ರಿಯೆ, ಅಗತ್ಯ ದಾಖಲೆಗಳು, ಅಂತರರಾಷ್ಟ್ರೀಯ ಗುಣಮಟ್ಟದ ಮಾನದಂಡಗಳು, ಜಾಗತಿಕ ಮಾರುಕಟ್ಟೆಯ ಅವಕಾಶಗಳು ಹಾಗೂ ಖರೀದಿದಾರರ ಸಂಪರ್ಕದ ಕುರಿತು ಮಾಹಿತಿ ಮತ್ತು ಮಾರ್ಗದರ್ಶನ ಒದಗಿಸುವುದು ಈ ಕೇಂದ್ರಗಳ ಉದ್ದೇಶವಾಗಿದೆ ಎಂದು ಹೇಳಿದರು.

ಕರ್ನಾಟಕವು ಕೈಮಗ್ಗ, ರೇಷ್ಮೆ, ಗಾರ್ಮೆಂಟ್ಸ್‌ ಹಾಗೂ ಜವಳಿ ಉತ್ಪಾದನೆಯಲ್ಲಿ ಬಲವಾದ ಪರಿಸರ ವ್ಯವಸ್ಥೆಯನ್ನು ಹೊಂದಿದೆ. ಇದನ್ನು ಜಾಗತಿಕ ಮಾರುಕಟ್ಟೆಯ ಬೇಡಿಕೆಯೊಂದಿಗೆ ಸಂಪರ್ಕಿಸುವ ಮೂಲಕ ರಾಜ್ಯದ ಜವಳಿ ಉತ್ಪನ್ನಗಳ ರಫ್ತು ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲಾಗುವುದು ಎಂದು ರೋಹಿಣಿ ಸಿಂಧೂರಿ ತಿಳಿಸಿದರು.

ಬೀದರ್‌, ದೇವನಹಳ್ಳಿಯಲ್ಲಿ ಬೃಹತ್‌ ಮೇಳ

ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕೈಮಗ್ಗ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ಮಾದರಿಯಲ್ಲಿ ಮುಂದಿನ ದಿನಗಳಲ್ಲಿ ಬೀದರ್‌ ಹಾಗೂ ದೇವನಹಳ್ಳಿಯಲ್ಲೂ ಬೃಹತ್‌ ಕೈಮಗ್ಗ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಜವಳಿ ಅಭಿವೃದ್ಧಿ ಆಯುಕ್ತ ಎ.ಬಿ. ಬಸವರಾಜು ತಿಳಿಸಿದರು.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಹಾಗೂ ಹಾಸನ ಜಿಲ್ಲೆಗಳನ್ನು ಚಾಂಪಿಯನ್‌ ಡಿಸ್ಟ್ರಿಕ್ಟ್ಸ್‌ ಹಾಗೂ ಬಳ್ಳಾರಿ, ಗದಗ, ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳನ್ನು ಆಸ್ಪಿರೇಷನ್‌ ಡಿಸ್ಟ್ರಿಕ್ಟ್ಸ್‌ ಎಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ರಫ್ತು ವಿಧಾನಗಳ ಕುರಿತು ತರಬೇತಿ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ. ಸಿ.ಎನ್‌. ಮಂಜುನಾಥ್‌, ರಾಜರಾಜೇಶ್ವರಿನಗರ ಶಾಸಕ ಮುನಿರತ್ನ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾಗೇಂದ್ರ ಕುಮಾರ್‌, ಕಾವೇರಿ ಹ್ಯಾಂಡ್‌ಲೂಮ್ಸ್‌ ಅಧ್ಯಕ್ಷ ಬಿ.ಜೆ. ಗಣೇಶ್‌, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್‌ ಕೆ., ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರಿಮಾ ಪನ್ಸಾರ್‌, ಕಾವೇರಿ ಹ್ಯಾಂಡ್‌ಲೂಮ್ಸ್‌ ವ್ಯವಸ್ಥಾಪಕ ನಿರ್ದೇಶಕಿ ಸೌಮ್ಯ, ಕೈಮಗ್ಗ ಮತ್ತು ಜವಳಿ ಇಲಾಖೆಯ ಹೆಚ್ಚುವರಿ ನಿರ್ದೇಶಕರಾದ ಸಿ.ಎಸ್‌. ಯೋಗೇಶ್‌ ಹಾಗೂ ಶ್ರೀಧರ್‌ ನಾಯಕ್‌ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು, ನೇಕಾರರು, ಕೈಮಗ್ಗ ಸಹಕಾರ ಸಂಘಗಳ ಪ್ರತಿನಿಧಿಗಳು ಹಾಗೂ ಜವಳಿ ಉದ್ಯಮಿಗಳು ಉಪಸ್ಥಿತರಿದ್ದರು.

RELATED ARTICLES
spot_img

Latest News