Homeರಾಜ್ಯರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಚಿಂತನೆ : ಡಿಸಿಎಂ ಪರಮೇಶ್ವರ್‌

ರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಚಿಂತನೆ : ಡಿಸಿಎಂ ಪರಮೇಶ್ವರ್‌

ಉಡುಪಿ, ಸೆಪ್ಟೆಂಬರ್‌ 18- ರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯ ನಿರ್ಮಿಸಲು ಚಿಂತನೆ ನಡೆದಿದ್ದು, ಅದನ್ನು ಉಡುಪಿ ಜಿಲ್ಲೆಯಲ್ಲಿ ಸ್ಥಾಪಿಸುವ ಸಾಧ್ಯತೆಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದರು.ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಬೆಳಪು ಗ್ರಾಮದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಅತ್ಯಾಧುನಿಕ ಸಂಶೋಧನಾ ಕೇಂದ್ರದ ಕಟ್ಟಡವನ್ನು ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಉಡುಪಿ ಜಿಲ್ಲೆಗೆ ಮೆಡಿಕಲ್‌ ಕಾಲೇಜು ಇಲ್ಲ. ಅದಕ್ಕೂ ಸಾಧ್ಯತೆ ಇರಬಹುದೇ ಎಂಬುದನ್ನು ಪರಿಶೀಲಿಸಲು ಇಲ್ಲಿಗೆ ಬಂದಿದ್ದೇನೆ. ಈ ಎಲ್ಲಾ ವಿಚಾರಗಳ ಕುರಿತು ಮಾಹಿತಿ ಪಡೆದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕಾಗಿ ಸುಮಾರು 53.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಬೃಹತ್‌ ಕಟ್ಟಡವು ಕೆಲ ವರ್ಷಗಳಿಂದ ಬಳಕೆಯಾಗದೆ ಖಾಲಿ ಬಿದ್ದಿದ್ದು, ದುರವಸ್ಥೆಗೆ ತಲುಪುವ ಭೀತಿಯಲ್ಲಿದೆ. ಕಟ್ಟಡ ಹಾಗೂ ಕ್ಯಾಂಪಸ್‌‍ನ ಸೂಕ್ತ ಮತ್ತು ಸದ್ಬಳಕೆಗೆ ಸರ್ಕಾರದ ಹಂತದಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

2014-15ನೇ ಸಾಲಿನ ಬಜೆಟ್‌ನಲ್ಲಿ ವಿಜ್ಞಾನ ಕೇಂದ್ರ ಸ್ಥಾಪಿಸುವ ಕುರಿತು ಘೋಷಣೆ ಮಾಡಲಾಗಿತ್ತು. ಕೇಂದ್ರ ಸರ್ಕಾರದ ರೂಸಾ ಯೋಜನೆಯಡಿ, ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರೂಸಾ ಅನುದಾನದ ಮೂಲಕ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿತ್ತು ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಎರಡು ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವನೆ ಇದ್ದು, ಅದರಲ್ಲಿ ಒಂದನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಆಯ್ಕೆ ಮಾಡಲಾಗಿತ್ತು. ವಿಜ್ಞಾನ ಕೇಂದ್ರಕ್ಕೆ ಅಗತ್ಯವಿರುವ ಮೂಲಸೌಕರ್ಯಗಳ ಕುರಿತು ನಕ್ಷೆ ತಯಾರಿಸಿ, ಅಗತ್ಯತೆಗಳ ಬಗ್ಗೆ ಚರ್ಚಿಸಿ, ಅನುಮೋದನೆ ಪಡೆದುಕೊಂಡ ಬಳಿಕ ಕಾಮಗಾರಿ ಆರಂಭಿಸಲಾಗಿತ್ತು. ಸುಮಾರು 50ರಿಂದ 60 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ನಿರ್ಮಿಸಲಾಗಿದೆ ಎಂದರು.

ಕಾರಣಾಂತರಗಳಿಂದ ರೂಸಾ ಕಾರ್ಯಕ್ರಮ ಸ್ಥಗಿತಗೊಂಡಿದ್ದು, ಮಂಗಳೂರು ವಿಶ್ವವಿದ್ಯಾನಿಲಯದಿಂದಲೂ ಅನುದಾನ ದೊರೆಯದ ಹಿನ್ನೆಲೆಯಲ್ಲಿ ವಿಜ್ಞಾನ ಕೇಂದ್ರದ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇದೀಗ ವಿಜ್ಞಾನ ಕೇಂದ್ರಕ್ಕೆ ಚಾಲನೆ ನೀಡುವ ಕುರಿತು ಪ್ರಸ್ತಾಪ ಮಾಡಲಾಗಿದ್ದು, ಈ ವಿಚಾರ ಉನ್ನತ ಶಿಕ್ಷಣ ಸಚಿವರ ಗಮನಕ್ಕೂ ಬಂದಿದೆ ಎಂದು ತಿಳಿಸಿದರು. ಒಟ್ಟಾರೆ, ಇಲ್ಲಿ ನಿರ್ಮಿಸಿರುವ ಕಟ್ಟಡಗಳು ಹಾಗೂ ಅಭಿವೃದ್ಧಿಪಡಿಸಿರುವ ಕ್ಯಾಂಪಸ್‌‍ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸರ್ಕಾರದ ಹಂತದಲ್ಲಿ ಅಗತ್ಯ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಕರಾವಳಿ ಭಾಗದಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದು, ಅವುಗಳಿಗೆ ಪರಿಹಾರ ಕಂಡುಕೊಳ್ಳುವುದು ಸಚಿವ ಸಂಪುಟ ಸಭೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ. ಕರಾವಳಿ ಭಾಗವನ್ನು ಕೇರಳ ಹಾಗೂ ಗೋವಾ ರಾಜ್ಯಗಳು ಪರಿಣಾಮಕಾರಿಯಾಗಿ ಬಳಸಿಕೊಂಡಿವೆ. ಕರ್ನಾಟಕದ ಕರಾವಳಿ ಭಾಗವನ್ನೂ ಇನ್ನಷ್ಟು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸುವ ಉದ್ದೇಶ ಸರ್ಕಾರಕ್ಕಿದೆ ಎಂದರು.

ಉಡುಪಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸರ್ಫಿಂಗ್‌ ನಡೆಯುತ್ತಿದೆ. ಇಂತಹ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ಮೂಲಕ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು ಇನ್ನಷ್ಟು ಬೆಳೆಸಿದರೆ ಉದ್ಯೋಗ ಸೃಷ್ಟಿಯಾಗುವುದರ ಜೊತೆಗೆ ಆರ್ಥಿಕ ಚಟುವಟಿಕೆಗಳೂ ಹೆಚ್ಚಾಗಲಿವೆ. ಈ ಹಿನ್ನೆಲೆಯಲ್ಲಿ ಟೂರಿಸಂ ಪಾಲಿಸಿಯ ಬಗ್ಗೆಯೂ ಚರ್ಚಿಸಲಾಗುವುದು ಎಂದು ತಿಳಿಸಿದರು.

ದೊಡ್ಡ ದೊಡ್ಡ ಕೈಗಾರಿಕೆಗಳನ್ನು ಈ ಭಾಗಕ್ಕೆ ತರುವುದು ಕಷ್ಟವಾಗಬಹುದು. ಆದರೆ ಸಾಫ್‌್ಟ ಇಂಡಸ್ಟ್ರಿಗಳನ್ನು ಕರಾವಳಿ ಭಾಗಕ್ಕೆ ತರಲು ಪ್ರಯತ್ನಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ವಿಧಾನಪರಿಷತ್‌ ಸದಸ್ಯರಾದ ಮಂಜುನಾಥ್‌ ಭಂಡಾರಿ, ಕಾಪು ಶಾಸಕ ಗುರ್ಮೆಸುರೇಶ್‌ಶೆಟ್ಟಿ, ಮಾಜಿ ಸಚಿವರಾದ ವಿನಯ್‌‍ ಕುಮಾರ್‌ ಸೊರಕೆೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನಕಾರ್ಯದರ್ಶಿ ನವೀನ್‌ರಾಜ್‌ಸಿಂಗ್‌, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
spot_img

Latest News