ಬೆಂಗಳೂರು, ಫೆ.28-ವಿದ್ಯಾರ್ಥಿ ಜೀವನದ ಮಹತ್ವದ ಹಾಗೂ ನಿರ್ಣಾಯಕ ಘಟ್ಟವಾಗಿರುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಇಂದಿನಿಂದ ರಾಜ್ಯಾದ್ಯಂತ ಆರಂಭಗೊಂಡಿದ್ದು, ಮಾ.17 ರವರೆಗೆ ನಡೆಯಲಿದೆ.
ಮೊದಲ ದಿನವಾದ ಇಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಕನ್ನಡ ಮತ್ತು ಅರೇಬಿಕ್ ಪರೀಕ್ಷೆಗಳನ್ನು ನಡೆಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶನದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಹಾಗೂ ವೆಬ್‌ಕಾಸ್ಟಿಂಗ್‌ನೊಂದಿಗೆ 1217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದೆ.
ಈ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 7 ರಂದು ಪ್ರಕಟಿಸುವುದಾಗಿ ಈಗಾಗಲೇ ಘೋಷಿಸಲಾಗಿದೆ. ರಾಜ್ಯದಲ್ಲಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು. ವಿಜ್ಞಾನ ವಿಭಾಗದಲ್ಲಿ 2,92,645, ವಾಣಿಜ್ಯ ವಿಭಾಗದಲ್ಲಿ 2,11,174, ಕಲಾ ವಿಭಾಗದಲ್ಲಿ 1,42,982 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಇದರಲ್ಲಿ 6,46,801 ಹೊಸಬರು, 50,540 ಪುನರಾವರ್ತಿತ ಹಾಗೂ 13,022 ಖಾಸಗಿ ಅಭ್ಯರ್ಥಿಗಳಿದ್ದಾರೆ.
ಅಕ್ರಮಗಳಿಗೆ ಅವಕಾಶವಿಲ್ಲದಂತೆ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿದ್ದು, ಆ ಪ್ರದೇಶದಲ್ಲಿ ಜೆರಾಕ್ಸ್ , ಸೈಬರ್, ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿತ್ತು.
ಸಾಮಾಜಿಕ ಜಾಲತಾಣದ ಮೇಲೆ ನಿಗಾ :
ವಾಟ್ಸ್ಯಾಪ್, ಟೆಲಿಗ್ರಾಮ್, ಇನ್ಸ್ಟಾಗ್ರಾಮ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆ ಪತ್ರಿಕೆ ಹರಿಬಿಡುವವರ ವಿರುದ್ಧ ಮತ್ತು ವದಂತಿ ಹಬ್ಬಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಎಚ್ಚರಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸಾರ್ಟ್ ವಾಚ್ ಹಾಗೂ ಇತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಗಣ್ಯರ ಶುಭಾಶಯ:
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ. ಆತ ವಿಶ್ವಾಸದಿಂದ ಪರೀಕ್ಷೆ ಬರೆಯಿರಿ, ಉತ್ತಮ ಅಂಕಗಳ ಜೊತೆಗೆ ಉಜ್ವಲ ಭವಿಷ್ಯವೂ ನಿಮದಾಗಲಿ ಎಂದು ಅವರು ಹಾರೈಸಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ. ಆತವಿಶ್ವಾಸ, ದೃಢನಂಬಿಕೆ, ಉತ್ತಮ ತಯಾರಿಯೊಂದಿಗೆ ಮುನ್ನುಗ್ಗಿ ಜಯ ನಿಮದಾಗಲಿ ಎಂದು ಹಾರೈಸಿದ್ದಾರೆ.
