ದಾವಣಗೆರೆ: ಕಾಂಗ್ರೆಸ್ನ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
94 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ 94 ವಯಸ್ಸಾಗಿದ್ದು, ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದ್ರೆ, ವಯೋಸಹಜ ಅನಾರೋಗ್ಯದ ಹಿನ್ನೆಲೆ ಕಳೆ ದಿನಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆಗಲೇ ಬೇರೆ ಬೇರೆ ಸುದ್ದಿ ಹರಿದಾಡಿದ್ದರಿಂದ ಈ ಬಗ್ಗೆ ಪುತ್ರ, ಸಚಿವ ಎಸ್ಎಸ್ ಮಲ್ಲಿಕಾರ್ಜುನ ಆವರು ಪ್ರತಿಕ್ರಿಯಿಸಿ ತಮ್ಮ ತಂದೆ ಚೆನ್ನಾಗಿದ್ದಾರೆ. ಗುರು ಹಿರಿಯರ ಆಶೀರ್ವಾದದಿಂದ ಇನ್ನೊಂದು ವಾರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದ್ದರು. ಆದ್ರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿದ್ದು ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ. 1931ರ ಜೂನ್ 16ರಂದು ದಾವಣಗೆರೆಯಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಧಾನಸಭೆಯ ಸದಸ್ಯರಾಗಿದ್ದು, ಅವರು ಭಾರತದಲ್ಲಿ ರಾಜ್ಯ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾಗಿದ್ದರು.
ಶಾಮನೂರು ಶಿವಶಂಕರಪ್ಪ ಅವರು ವಿಧಾನಸಭೆಗೆ ಆರು ಸಲ ಶಾಸಕರಾಗಿ, ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದಾರೆ. 1997ರಲ್ಲಿ ದಾವಣಗೆರೆ ಲೋಕಸಭೆ ಮಧ್ಯಂತರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಐದು ದೇಶಕದ ರಾಜಕೀಯ ಜೀವನದಲ್ಲಿ ಒಂದು ಬಾರಿ ಸೋಲನ್ನಪ್ಪಿದ್ದಾರೆ. 1994, 2004, 2008, 2013, 2018, 2023 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಶಾಮನೂರು ಶಿವಶಂಕರಪ್ಪ ಅವರು ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಚಿವರಾಗಿಯೂ ಕಾರ್ಯನಿರ್ವಹಿಸಿ, ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಲಿಂಗಾಯತ ಸಮಾಜದ ಸಂಘಟನೆ ಮತ್ತು ಏಕತೆಗೆ ಅವರು ಅಪಾರ ಸೇವೆ ಸಲ್ಲಿಸಿದ್ದರು.
ಲಿಂಗಾಯತ ನಾಯಕರಲ್ಲೇ ಮುಂಚೂಣಿ ಹೋರಾಟಗಾರ ಹಾಗೂ ಕರ್ನಾಟಕದಲ್ಲಿ ಲಿಂಗಾಯತ ಸಮುದಾಯ ಮತ್ತು ವಿರಶೈವ ಸಮುದಾಯವನ್ನು ಒಗ್ಗೂಡಿಸಲು ಶ್ರಮ ವಹಿಸಿದ್ದ ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆ ಅವರ ಬೆಂಬಲಿಗರಿಗೆ ಹಾಗೂ ಅಭಿಮಾನಿಗಳಿಗೆ ನೋವು & ಆಘಾತ ತಂದಿದೆ. ಕಾಂಗ್ರೆಸ್ ಪಕ್ಷವೇ ಶಾಮನೂರು ಶಿವಶಂಕರಪ್ಪ ಅವರ ರಾಜಕೀಯ ಅಖಾಡವಾಗಿದ್ದರೂ, ಪ್ರತಿಯೊಂದು ಪಕ್ಷದಲ್ಲೂ ಸ್ನೇಹಿತರನ್ನು ಹೊಂದಿದ್ದರು. ಆದರೆ ಇಂದು ದಿಢೀರ್ ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆ ಸುದ್ದಿ ಭಾರಿ ದೊಡ್ಡ ನೋವು ಹಾಗೂ ದುಖಃವನ್ನು ಅಭಿಮಾನಿಗಳಿಗೆ ತರಿಸಿದೆ.
ಅವರ ನಿಧನಕ್ಕೆ ಮುಖ್ಯಮಂತ್ರಿ, ರಾಜ್ಯದ ಅನೇಕ ಸಚಿವರು, ರಾಜಕೀಯ ನಾಯಕರು ಹಾಗೂ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ರಾಜ್ಯ ರಾಜಕೀಯ ಹಾಗೂ ಸಮಾಜಸೇವಾ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ.
