Sunday, April 19, 2026
Homeರಾಜ್ಯಹಿರಿಯ ಪತ್ರಕರ್ತ ಪಿ.ರಾಮಯ್ಯ ವಿಧಿವಶ

ಹಿರಿಯ ಪತ್ರಕರ್ತ ಪಿ.ರಾಮಯ್ಯ ವಿಧಿವಶ

Senior journalist P Ramaiah passes away

ಬೆಂಗಳೂರು, ಫೆ.11- ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾಗಿದ್ದ ಪಿ.ರಾಮಯ್ಯ (93 )ಅವರು ನಿನ್ನೆ ಇಹಲೋಕ ತ್ಯಜಿಸಿದ್ದಾರೆ .ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು ಹಾಗೂ ಮೊಮಕಳನ್ನು ಅಗಲಿದ್ದಾರೆ .

ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ರಾಮಯ್ಯ ಅವರ ಪುತ್ರ ಡಾ.ಬಾಲಾಜಿ ತಿಳಿಸಿದ್ದಾರೆ.ಮೂಲತಃ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿ ಬ್ಯಾಡರಹಳ್ಳಿಯಲ್ಲಿ ಪಿ.ರಾಮಯ್ಯ ಅವರು 1933ರ ಸೆಪ್ಟೆಂಬರ್‌ 12 ರಂದು ಜನಿಸಿದ್ದರು. ಪ್ರಸಿದ್ಧ ದಿ ಹಿಂದೂ ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹ್ದುೆಗಳಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದ ರಾಮಯ್ಯ ಅವರು ಒಮೆ ವಿಧಾನ ಪರಿಷತ್ತಿನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

ಅಭಿಮಾನಿ ಪ್ರಕಾಶನದ ವತಿಯಿಂದ ಪಿ.ರಾಮಯ್ಯ ಅವರ 60 ವರ್ಷಗಳ ಅನುಭವ ಕಥನವನ್ನು ಒಳಗೊಂಡಿರುವ ನಾನು ಹಿಂದೂ ರಾಮಯ್ಯ ಎಂಬ ಪುಸ್ತಕವನ್ನು ಹೊರತರಲಾಗಿತ್ತು. ಈ ಕೃತಿಯು ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ಪರಾಮರ್ಶನ ಗ್ರಂಥದ ರೀತಿಯಲ್ಲಿ ಉಪಯುಕ್ತವಾಗಿದೆ.


ಶ್ರೀಯುತರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ , ಕೆಂಪೇಗೌಡ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿದ್ದವು. ಅಲ್ಲದೇ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗೂ ಪತ್ರಕರ್ತರ ಕಲ್ಯಾಣ ಸಮಿತಿಯ ಸದಸ್ಯರಾಗಿಯೂ ಅಮೂಲ್ಯ ಸೇವೆ ಸಲ್ಲಿಸಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ ಅವರು ಪರಿಹಾರ ದೊರಕಿಸಿದ್ದರು .

ಸತ್ಯ ಮತ್ತು ಪ್ರಾಮಾಣಿಕತೆಗೆ ನಿಷ್ಠರಾಗಿ ಪತ್ರಿಕೋದ್ಯಮದ ಧ್ಯೇಯೋದ್ದೇಶಗಳನ್ನು ಎತ್ತಿ ಹಿಡಿದಿದ್ದರು. ಪತ್ರಕರ್ತರಿಗೆ ಹಿರಿಯಣ್ಣನ ರೀತಿ ಮಾರ್ಗದರ್ಶಕರಾಗಿದ್ದರು ಇವರನ್ನು ಪತ್ರಿಕೋದ್ಯಮದ ತಪಸ್ವಿ ಎಂದೇ ಬಿಂಬಿಸಲಾಗಿತ್ತು.

ಹಿರಿಯ ರಾಜಕಾರಣಿಗಳ ಜೊತೆ ನಿಕಟ ಒಡನಾಟವನ್ನು ರಾಮಯ್ಯ ಅವರು ಹೊಂದಿದ್ದರು. ಸದಾಶಿವನಗರದ ಅವರ ಸ್ವಗೃಹದಲ್ಲಿ ಇಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನದವರೆಗೆ ರಾಮಯ್ಯ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಆದಿ ಚುಂಚನಗಿರಿ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಶ್ರೀ ಸತ್ಕೀರ್ತಿನಾಥ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ಗೃಹ ಸಚಿವ ಡಾ. ಜಿ..ಪರಮೇಶ್ವರ್‌, ಕೃಷಿ ಸಚಿವ ಚಲುವರಾಯಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಮಾಜಿ ಸಚಿವ ಜಿ.ಟಿ.ದೇವೇಗೌಡ ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಪತ್ರಕರ್ತರು, ಬಂಧು-ಬಾಂಧವರು, ಸ್ನೇಹಿತರು ರಾಮಯ್ಯ ಅವರ ಅಂತಿಮ ದರ್ಶನ ಪಡೆದರು. ಬಳಿಕ ಮಧ್ಯಾಹ್ನ 3 ಗಂಟೆಗೆ ಹರಿಶ್ಚಂದ್ರ ಘಾಟ್‌ನಲ್ಲಿ ಮೃತರ ಅಂತಿಮ ಸಂಸ್ಕಾರವನ್ನು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನೆರವೇರಿಸಲಾಗುವುದು.

ಸಂತಾಪ:
ಅಗಲಿದ ಪತ್ರಕರ್ತ ಪಿ.ರಾಮಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೇಂದ್ರ ಸಚಿವರಾದ ಹೆಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕರ್ನಾಟಕ ಮಾಧ್ಯಮ ಅಕಾಡೆಮಿ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಬೆಂಗಳೂರು ವರದಿಗಾರರ ಕೂಟ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

RELATED ARTICLES

Latest News