ಬೆಂಗಳೂರು, ಜೂ.9- ನೈರುತ್ಯ ಮುಂಗಾರು ಚೇತರಿಕೆ ಕಂಡಿದ್ದು, ರಾಜ್ಯಾದ್ಯಂತ ವಿಸ್ತರಿಸಿದೆ. ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ.ಹವಾಮಾನ ಮುನ್ಸೂಚನೆ ಪ್ರಕಾರ, ಜೂ.13 ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಕೊಡಗು ಜಿಲ್ಲೆಗಳಲ್ಲೂ ಸಹ ಭಾರೀ ಮಳೆಯಾಗುವ ಲಕ್ಷಣಗಳಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ.ಮೈಸೂರು, ಚಾಮರಾಜನಗರ, ದಾವಣಗೆರೆ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಬಲವಾದ ಮೇಲೈ ಗಾಳಿ ಬೀಸಲಿದೆ. ಆಗಾಗ್ಗೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಲೆನಾಡು ಸೇರಿದಂತೆ ಜಲಾನಯನ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳ ಒಳಹರಿವು ಅಲ್ಪಪ್ರಮಾಣದಲ್ಲಿ ಆರಂಭವಾಗಿದೆ. ಇದೇ ರೀತಿ ಮುಂಗಾರು ಮಳೆ ಮುಂದುವರೆಯುವ ಮುನ್ಸೂಚನೆ ಇರುವುದರಿಂದ ಜಲಾಶಯಗಳ ಒಳಹರಿವು ಹೆಚ್ಚಾಗುವ ಮುನ್ಸೂಚನೆಗಳಿವೆ.
