ಬೆಂಗಳೂರು, ಮಾ.13- ವಾಣಿಜ್ಯ ಮತ್ತು ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಿದರೆ ಯಾರೇ ಆಗಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹಿತೇಂದ್ರ ಅವರು ಎಚ್ಚರಿಕೆ ನೀಡಿದ್ದಾರೆ.
ಈ ಸಂಜೆ ಯೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ನಮ ಪೊಲೀಸರು ರಾಜ್ಯದಾದ್ಯಂತ ಪರಿಶೀಲನೆ ಮಾಡುತ್ತಿದ್ದಾರೆ. ಇದುವರೆಗೂ ಅಕ್ರಮವಾಗಿ ಸಿಲಿಂಡರ್ ಸಂಗ್ರಹ, ಸಾಗಾಟದಂತಹ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಹೇಳಿದರು.
ನಗರ, ಜಿಲ್ಲೆ, ತಾಲ್ಲೂಕುಗಳಲ್ಲೂ ಸಹ ಆಯಾಯ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಿಲಿಂಡರ್ ದಾಸ್ತಾನು ಗೋದಾಮುಗಳಿಗೆ ಹಾಗೂ ಸಂಬಂಧಿಸಿದ ಕಚೇರಿಗಳಿಗೂ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ ಎಂದು ವಿವರಿಸಿದರು.
ಒಂದು ವೇಳೆ ಗ್ಯಾಸ್ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.ಸಿಲಿಂಡರ್‌ಗಳನ್ನು ಸಾಗಾಣೆ ಮಾಡುವವರ ಬಳಿ ಬುಕ್ಕಿಂಗ್ ರಸೀದಿ ಇರಬೇಕು.ಒಂದು ವೇಳೆ ರಸೀದಿ ಇಲ್ಲದಿದ್ದರೆ ಅಂತಹ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗುವುದು ಎಂದು ಅವರು ಹೇಳಿದರು.
