ಬೆಂಗಳೂರು, ಜೂ.9- ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಹೆಬ್ಬಾಳದ ಶಾಂತಿಧಾಮ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಲೋಕಸಭಾ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವು ಗಣ್ಯರು ಸೂರಜ್ ಹೆಗ್ಡೆ ಅವರ ಅಂತಿಮ ದರ್ಶನ ಪಡೆದರು.



ಡಾಲರ್‌ರಸ ಕಾಲೋನಿಯಲ್ಲಿರುವ ಸೂರಜ್ ಹೆಗ್ಡೆ ನಿವಾಸಕ್ಕೆ ಆಗಮಿಸಿದ ರಾಹುಲ್‌ಗಾಂಧಿ, ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳು ಹೆಗ್ಡೆ ಅವರ ಪತ್ನಿ ಶಿಲ್ಪ, ಪುತ್ರರಾದ ಸಮೃದ್‌್ಧ, ವಿಶೃತ್ ಸೇರಿದಂತೆ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು. ಅಲ್ಲದೆ ಸಚಿವರಾದ ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಯು.ಟಿ.ಖಾದರ್, ಭೈರತಿ ಸುರೇಶ್‌ರವರು ಹೆಗ್ಡೆಯವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.
ಹೆಬ್ಬಾಳದ ಶಾಂತಿಧಾಮ ಚಿತಾಗಾರದಲ್ಲಿ ಅಂತ್ಯಸಂಸ್ಕಾರಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಭಾನುವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಸೂರಜ್ ಹೆಗ್ಡೆ ನಿಧನರಾದರು. ಇವರು ತಮಿಳುನಾಡು ಹಾಗೂ ಪುದುಚೇರಿ ಕಾಂಗ್ರೆಸ್ ಘಟಕಗಳ ಉಸ್ತುವಾರಿ ಜವಾಬ್ದಾರಿಯನ್ನು ನಿರ್ವಹಿಸಿದ್ದರು.
ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸುರವರ ಮೊಮಗ ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ಅನುವು ಮಾಡಿಕೊಡಲಾಗಿತ್ತು.
