ಬೆಂಗಳೂರು, ಅ.14- ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೌರವಕ್ಕೆ ಧಕ್ಕೆ ತರಲು ಯತ್ನಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ಅಜ್ಞಾತ ಸ್ಥಳದಲ್ಲಿಟ್ಟು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
ಈ ಕೃತ್ಯದ ಹಿಂದೆ ಯಾರ ಕೈವಾಡವಿದೆ, ವಿಡಿಯೋವನ್ನು ಎಲ್ಲಿಂದ ಸೃಷ್ಟಿಸಲಾಗಿದೆ ಹಾಗೂ ಯಾರೆಲ್ಲ ಹೆಚ್ಚು ಫಾರ್ವರ್ಡ್ ಮಾಡಿದ್ದಾರೆ ಎಂಬ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಕಲಿ ಹಾಗೂ ದುರುದ್ದೇಶಪೂರಿತ ವಿಡಿಯೋಗಳನ್ನು ಹಂಚಿಕೆ ಮಾಡಿ ತೇಜೋವಧೆ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ನಗರದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು. ಸುಳ್ಳು ಮಾಹಿತಿ ಹರಡುತ್ತಿದ್ದ ನಿರ್ದಿಷ್ಟ ಸಾಮಾಜಿಕ ಜಾಲತಾಣ ಖಾತೆಗಳ ಐಡಿ ಹಾಗೂ ಇತರ ವಿವರಗಳನ್ನು ದೂರಿನೊಂದಿಗೆ ನೀಡಿದ್ದರು.
ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್ ಆಯುಕ್ತರು, ತನಿಖೆಗಾಗಿ ಸಿಸಿಬಿಯ ಸೈಬರ್ ಕ್ರೈಂ ಠಾಣೆಗೆ ವಹಿಸಿದ್ದರು.ಈ ದೂರಿನ ಆಧಾರದ ಮೇಲೆ ಸಿಸಿಬಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಸೈಬರ್ ಕ್ರೈಂ ಠಾಣೆ ಪೊಲೀಸರು, ವಿಡಿಯೋವನ್ನು ಪ್ರಚಾರ ಮಾಡಿದ ಪ್ರಮುಖ ಖಾತೆಗಳ ಐಪಿ ವಿಳಾಸಗಳ ಮೂಲಕ ಸಾಧನಗಳ ಮಾಲೀಕರನ್ನು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.
