ಚಿಕ್ಕಮಗಳೂರು, ಆ.25- ನಗರದ ಟಿಪ್ಪು ನಗರದಲ್ಲಿ 40 ಅಡಿ ಎತ್ತರದ ಟಿಪ್ಪು ಕಟೌಟ್ ಅಳವಡಿಸಿ, ಪಾಕಿಸ್ತಾನ ಪರ ಹಾಗೂ ಹಿಂಸೆಯನ್ನು ಪ್ರಚೋದಿಸುವ ರೀತಿಯ ಹಾಡು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ. ರವಿ, ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಪ್ಪು ನಗರದಲ್ಲಿ 40 ಅಡಿ ಎತ್ತರದ ಟಿಪ್ಪು ಕಟೌಟ್ ಅಳವಡಿಸಲಾಗಿದೆ. ಅದರೊಂದಿಗೆ ಪಾಕಿಸ್ತಾನ ಪರವಾದ ಹಾಗೂ ಹಿಂಸೆಯನ್ನು ಪ್ರಚೋದಿಸುವ ಅಂಶಗಳನ್ನು ಒಳಗೊಂಡ ಹಾಡು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿದರು.
ಸಾರ್ವಜನಿಕವಾಗಿ ಪಾಕಿಸ್ತಾನ ಪರ ಘೋಷಣೆ ಅಥವಾ ಹಿಂಸೆಯನ್ನು ಪ್ರಚೋದಿಸುವ ಹೇಳಿಕೆಗಳನ್ನು ಒಳಗೊಂಡ ಹಾಡು ಪ್ರಸಾರ ಮಾಡಿರುವುದು ಗಂಭೀರ ವಿಚಾರ. ಈ ಕುರಿತು ಪೊಲೀಸರು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಭಾರತದಲ್ಲಿ ವಾಸಿಸುತ್ತಾ ಪಾಕಿಸ್ತಾನ ಪರ ಹೇಳಿಕೆಗಳನ್ನು ನೀಡುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ದೇಶದ್ರೋಹದ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಜವಾಬ್ದಾರಿ ಸರ್ಕಾರದ್ದು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಂತಹವರ ಧೈರ್ಯ ಹೆಚ್ಚಾಗಿದೆ ಎಂದು ಆರೋಪಿಸಿದ ಅವರು, ಕಾನೂನು ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಂಡು ಜೈಲಿಗೆ ಕಳುಹಿಸಬೇಕು ಎಂದು ಆಗ್ರಹಿಸಿದರು.
ಭಾರತಪಾಕಿಸ್ತಾನ ವಿಭಜನೆಯ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ವ್ಯಕ್ತಪಡಿಸಿದ್ದ ಅಭಿಪ್ರಾಯಗಳನ್ನು ಉಲ್ಲೇಖಿಸಿದ ರವಿ, ದೇಶದ ಹಿತ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದರು. ಪಾಕಿಸ್ತಾನ ಪರ ಹೇಳಿಕೆ ಅಥವಾ ಘೋಷಣೆಗಳನ್ನು ನೀಡುವವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ತಮ ಆಗ್ರಹವಾಗಿದೆ ಎಂದು ಅವರು ತಿಳಿಸಿದರು.
