ಬೆಂಗಳೂರು, ಆ.14- ನಾವು ಮಹಿಳೆಯರ ವಿರೋಧಿಗಳಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮೇಲೆ ನಂಬಿಕೆ, ವಿಶ್ವಾಸವಿದ್ದು, ಮುಂದಿನ ದಿನಗಳಲ್ಲಿ ಮಹಿಳೆಯರಿಗೂ ಸಚಿವ ಸ್ಥಾನ ದೊರೆಯಲಿದೆ ಎಂದರು.
ಪಂಚಾಯಿತಿಗಳಲ್ಲಿ ಮಹಿಳಾ ಮೀಸಲಾತಿ ಈಗಾಗಲೇ ಜಾರಿಯಲ್ಲಿದೆ. ಕಾರಣಾಂತರಗಳಿಂದ ಸದ್ಯ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ದೊರೆತಿಲ್ಲ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 12 ವರ್ಷ ಕಳೆದಿವೆ. ಈ ಅವಧಿಯಲ್ಲಿ ಮಹಿಳೆಯರಿಗಾಗಿ ಏನು ಮಾಡಿದ್ದಾರೆ ಎಂಬುದನ್ನು ಪ್ರಶ್ನಿಸಬೇಕಲ್ಲವೇ? ಎಂದು ಸಂತೋಷ್ ಲಾಡ್ ಪ್ರಶ್ನಿಸಿದರು.
ಸಚಿವ ನಾಗೇಂದ್ರ ಅವರ ವಿರುದ್ಧ ಆರೋಪ ಕೇಳಿಬಂದಾಗ ಅವರು ಎರಡು ವರ್ಷಗಳ ಹಿಂದೆ ರಾಜೀನಾಮೆ ನೀಡಿದ್ದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವಾಪಸ್ ಬಂದಿದೆ. ಸರ್ಕಾರ ಈ ಕುರಿತು ಮಾಹಿತಿ ಪಡೆದುಕೊಂಡಿದೆ ಎಂದು ಹೇಳಿದರು.
ಆರ್‌ಎಸ್‌ಎಸ್ ಅನ್ನು ನಿಷೇಧಿಸುವ ಯಾವುದೇ ವಿಧೇಯಕವಲ್ಲ. ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಯಂತ್ರಣಕ್ಕೆ ತರಲು ಮುಂದಾಗಿದ್ದೇವೆ ಎಂದು ಸ್ಪಷ್ಟಪಡಿಸಿದ ಅವರು, ಪದೇಪದೇ ಆರ್‌ಎಸ್‌ಎಸ್ ಅನ್ನು ನಿಷೇಧಿಸಲಾಗುತ್ತಿದೆ ಎಂದು ಹೇಳಬೇಡಿ ಎಂದರು.
