Homeರಾಜ್ಯಮುಂದಿನ ವಾರದಲ್ಲಿ ರಾಜ್ಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ

ಮುಂದಿನ ವಾರದಲ್ಲಿ ರಾಜ್ಯಾದ್ಯಂತ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು,ಸೆ.19- ಬಂಗಾಳಕೊಲ್ಲಿಯ ಅಂಡಮಾನ್‌ ದ್ವೀಪದ ಸಮೀಪದಲ್ಲಿ ವಾಯುಭಾರ ಕುಸಿತವಾಗುತ್ತಿದ್ದು, ರಾಜ್ಯದಲ್ಲಿ ಇನ್ನೊಂದು ವಾರ ಮಳೆಯ ಪ್ರಮಾಣ ಹೆಚ್ಚಳವಾಗಲಿದೆ.
ಇಂದಿನಿಂದ ಸೆ.24ರವರೆಗೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಪೂರ್ವ ಭಾಗದ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ವಾರದಲ್ಲಿ ರಾಜ್ಯಾದ್ಯಂತ ವ್ಯಾಪಕ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ನೈರುತ್ಯ ಮುಂಗಾರು ಮಾರುತಗಳ ಮರಳುವಿಕೆ ಪ್ರಕ್ರಿಯೆ ಆರಂಭವಾಗಿದ್ದು, ಈಶಾನ್ಯ ಹಿಂಗಾರು ಮಾರುತಗಳು ಆರಂಭವಾಗುವ ಈ ಪರ್ವ ಕಾಲದಲ್ಲಿ ಮಳೆ ಹೆಚ್ಚಾಗುವುದು ಸಾಧಾರಣ ಪ್ರಕ್ರಿಯೆ ಆಗಿದೆ.

ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಮಳೆ ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದು, ಭೀಕರ ಬರಗಾಲ ಆವರಿಸಿದೆ. ಮುಂಗಾರು ಹಂಗಾಮಿನ ಬೆಳೆಗಳು ತೇವಾಂಶದ ಕೊರತೆಯಿಂದ ಒಣಗುತ್ತಿದ್ದು, ರೈತರು ಮಳೆಗಾಗಿ ಆಕಾಶದತ್ತ ಮುಖ ಮಾಡುವಂತಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತವು ಪ್ರಬಲವಾಗುವ ಲಕ್ಷಣಗಳಿರುವುದರಿಂದ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ನಾಳೆಯಿಂದ ಮಳೆ ಪ್ರಮಾಣ ಹೆಚ್ಚಾಗುವ ಲಕ್ಷಣಗಳಿವೆ.

ಮುಂದಿನ ವಾರದಲ್ಲಿ ದಕ್ಷಿಣ ಒಳನಾಡು, ರಾಜ್ಯದ ಪೂರ್ವ ಭಾಗದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುವ ನಿರೀಕ್ಷೆಗಳಿವೆ.

RELATED ARTICLES
spot_img

Latest News