Wednesday, May 8, 2024
Homeರಾಜ್ಯನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ಸಿದ್ರಾಮುಲ್ಲಾಖಾನ್ ಎಂದು ಘೋಷಣೆ ಕೂಗಿ ಆಕ್ರೋಶ

ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ಸಿದ್ರಾಮುಲ್ಲಾಖಾನ್ ಎಂದು ಘೋಷಣೆ ಕೂಗಿ ಆಕ್ರೋಶ

ಬೆಂಗಳೂರು,ಏ.22- ಸಹಪಾಠಿಯಿಂದಲೇ ಬರ್ಬರವಾಗಿ ಹತ್ಯೆಗೀಡಾದ ನೇಹಾ ಕೊಲೆ ಪ್ರಕರಣ ವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ತುಷ್ಟೀಕರಣ ನಿಲ್ಲಿಸದಿದ್ದರೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ಸಂದೇಶವನ್ನು ರವಾನಿಸಿತು.

ಬಿಜೆಪಿ ರಾಜ್ಯ ಘಟಕವು ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮೈಸೂರು, ಧಾರವಾಡ, ತುಮಕೂರು, ಹಾವೇರಿ, ಬೆಳಗಾವಿ, ಬಳ್ಳಾರಿ, ಬಾಗಲಕೋಟೆ, ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಚಿತ್ರದುರ್ಗ, ರಾಮನಗರ, ಮಂಡ್ಯ, ವಿಜಯನಗರ, ದಾವಣಗೆರೆ, ಶಿವಮೊಗ್ಗ ಮತ್ತಿತರ ಕಡೆ ಬಿಜೆಪಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರಹಾಕಿದರು.

ಹುಬ್ಬಳ್ಳಿಯಲ್ಲಂತೂ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ, ಟೈರ್ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ರಾಮುಲ್ಲಾಖಾನ್, ಡಿಕೆ ಬ್ರದರ್ಸ್ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಇಷ್ಟೇ ಅಲ್ಲ, ರಸ್ತೆ ಬಂದ್ ಮಾಡಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ವೃತ್ತದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟೈರ್ಗೆ ಬೆಂಕಿ ಹಚ್ಚಿ ಫಯಾಜ್ ಫೋಟೋ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಇಷ್ಟೇ ಅಲ್ಲ, ಮಹಿಳಾ ಕಾರ್ಯಕರ್ತರು ಆರೋಪಿ ಫಯಾಜ್ ಫೋಟೋಗೆ ಚಪ್ಪಲಿಯಿಂದ ಹೊಡೆದು ಸಿಟ್ಟು ತೀರಿಸಿಕೊಂಡರು. ಬಿಜೆಪಿಗೆ ಎಬಿವಿಪಿ ಹಾಗೂ ಕೆಲವು ಹಿಂದೂಪರ ಸಂಘಟನೆಗಳು ಕೈಜೋಡಿಸಿದ್ದವು.

ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಪ್ರೀತಂ ಗೌಡ ಹಾಗೂ ರಘು ಕೌಟಿಲ್ಯ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ನಗರದ ಪ್ರಮುಖ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಗಾಂವೃತ್ತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಮಹಿಳಾ ಕಾರ್ಯಕರ್ತರು ಭಾಗಿಯಾದರು. ಇಷ್ಟೇ ಅಲ್ಲದೆ ತುಮಕೂರು, ಹಾವೇರಿ, ಬಳ್ಳಾರಿ, ಬಾಗಲಕೋಟೆ, ಕಲಬುರಗಿಯಲ್ಲೂ ಘಟಾನುಘಟಿ ನಾಯಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿ-ಧಾರವಾಡದಲ್ಲಿ ಪ್ರತಿಭಟನೆಗೆ ವ್ಯಾಪಕವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಚಿಕ್ಕೋಡಿ, ಹಾವೇರಿ, ಬಾಗಲಕೋಟೆ ಸೇರಿದಂತೆ ಮತ್ತಿತರ ಕಡೆ ಸ್ವಯಂಪ್ರೇರಿತರಾಗಿ ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದರು.ನೇಹಾ ಹಿರೇಮಠ ಹತ್ಯೆ ಖಂಡಿಸಿ ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆ ಕರೆ ನೀಡಿದ್ದ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಮುಸ್ಲಿಂ ಸಮುದಾಯದವರು ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಬಂದ್ಗೆ ಬೆಂಬಲ ಸೂಚಿಸಲಾಗಿತ್ತು.

ಜೊತೆಗೆ ಬಂದ್ ಮಾಡಲಾದ ಅಂಗಡಿಗಳಿಗೆ ನೇಹಾ ಶ್ರದ್ಧಾಂಜಲಿಯ ಪೊಸ್ಟರ್ ಅಂಟಿಸಲಾಗಿತ್ತು. ಅಂಜುಮನ್ ಸಂಸ್ಥೆಯಿಂದ ಡಿಸಿ ಕಚೇರಿವರೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪಂಜಿನ ಮೆರವಣಿಗೆ ನಡೆಸಿದ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ನೇಹಾ ಹಿರೇಮಠ ಹತ್ಯೆ ಖಂಡಿಸಿ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿತ್ತು. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಅರ್ಧ ದಿನ ಬಂದ್ಗೆ ಕರೆ ನೀಡಿದ್ದರು.

ಅಂಜುಮನ್ ಸಂಸ್ಥೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಂಜಿನ ಮೆರವಣಿಗೆ ಮಾಡಿ, ಕಪ್ಪುಪಟ್ಟಿ ಧರಿಸಿ ಜಸ್ಟೀಸ್ ಫಾರ್ ನೇಹಾ ಎಂದು ಅಂಗಡಿಗಳಿಗೆ ಭಿತ್ತಿಪತ್ರ ಅಂಟಿಸಿದ್ದಾರೆ. ಮೆರವಣಿಗೆಯಲ್ಲಿ ಅಂಜುಮನ್ ಸಂಸ್ಥೆ ಸದಸ್ಯರು ಮತ್ತು ಜನರು ಭಾಗವಹಿಸಿದ್ದರು. ಇನ್ನು ಹಿಂದೂಪರ ಸಂಘಟನೆಗಳು ನಗರದ ಪ್ರಮುಖ ವೃತ್ತಗಳಲ್ಲಿ ರಸ್ತೆ ತಡೆ ನಡೆಸಿ ಟೈರಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ಹಂತಕ ಫಯಾಜ್ಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.

ತುಮಕೂರಿನ ಬಿಜಿಎಸ್ ವೃತ್ತದಿಂದ ಡಿಸಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೊಲೆಗಡುಕ ಸಿದ್ದರಾಮಯ್ಯ, ಸಿದ್ದರಾಮುಲ್ಲಾ ಖಾನ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆಯರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು. ವ್ಯಾಪಕ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ಮೂಲಕ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದರು. ನೇಹಾ ಹಿರೇಮಠ ಹತ್ಯೆ ಖಂಡಿಸಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದರು. ಬಳ್ಳಾರಿಯ ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಬಳಿ ತಲುಪಿತು. ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ರಾಜ್ಯಸರ್ಕಾರದ ಅತಿಯಾದ ತುಷ್ಠೀಕರಣದ ನೀತಿಯಿಂದಾಗಿ ಈ ರೀತಿ ಕಗ್ಗೊಲೆಗಳು ನಡೆಯುತ್ತಿವೆ. ನಮಗೆ ಹೇಳುವವರು, ಕೇಳುವವರು ಯಾರೂ ಇಲ್ಲ ಎಂಬ ಮನೋಭಾವನೆಗೆ ಕೆಲವರು ಬಂದಿದ್ದಾರೆ. ಓರ್ವ ವಿದ್ಯಾರ್ಥಿನಿಯನ್ನು ಕಾಲೇಜು ಕ್ಯಾಂಪಸಿನಲ್ಲೇ ಇಷ್ಟು ಬರ್ಭರವಾಗಿ ಹತ್ಯೆ ಮಾಡುತ್ತಾರೆ ಎಂದರೆ ಉಳಿದವರಿಗೆ ರಕ್ಷಣೆ ಸಿಗಲು ಸಾಧ್ಯವೇ ಎಂದು ಪ್ರತಿಭಟನಾ ನಿರತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ನೇಹಾಳನ್ನು ಬರ್ಭರವಾಗಿ ಹತ್ಯೆಗೈದ ಆರೋಪಿಗೆ 3 ತಿಂಗಳೊಳಗೆ ಗಲ್ಲುಶಿಕ್ಷೆಯಾಗಬೇಕು. ಇವನ ಪರ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು. ವಿದ್ಯಾರ್ಥಿನಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸಬಾರದು ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ನೇಹಾ ಹತ್ಯೆ ಪ್ರಕರಣದಲ್ಲಿ ಲವ್ ಜಿಹಾದ್ ಇದೆ ಎಂದು ಬಿಜೆಪಿ ಆರೋಪಿಸುತ್ತಿದೆ.

ಬಿಜೆಪಿ ಕೇಂದ್ರ ಸಚಿವರು ಸೇರಿದಂತೆ ಬಿಜೆಪಿ ಎಲ್ಲಾ ನಾಯಕರು ಇದು ಲವ್ ಜಿಹಾದ್ ಪ್ರಕರಣ ಎಂದೂ, ಇದನ್ನು ಅದೇ ದೃಷ್ಟಿಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು. ರಾಜ್ಯ ಸರ್ಕಾರ ಈ ವಿಷಯದಲ್ಲಿ ಮೃದು ಧೋರಣೆ ತಳೆದಿದೆ ಎಂದು ಆರೋಪಿಸಿದೆ.ಪ್ರತಿಭಟನೆ ಹಿನ್ನೆಲೆಯಲ್ಲಿ ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಿಗಿಭದ್ರತೆಯನ್ನು ಕೈಗೊಳ್ಳಲಾಗಿತ್ತು. ರಾಜ್ಯದ ಬಹುತೇಕ ಕಡೆ ಪ್ರತಿಭಟನೆ ನಡೆದಿದೆ.

RELATED ARTICLES

Latest News