ಬೆಂಗಳೂರು, ಸೆ.8- ಮದ್ದೂರಿನಲ್ಲಿ ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ 21 ಜನರನ್ನು ಬಂಧಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಿನಲ್ಲಿ ನಿನ್ನೆ ಗಣಪತಿ ಮೂರ್ತಿ ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ವಿಚಾರಣೆ ನಡೆಸಿದ ನಂತರ ಇಪ್ಪತ್ತೊಂದು ಜನರನ್ನು ಈಗಾಗಲೇ ಬಂಧಿಸಲಾಗಿದೆ ಎಂದರು.
ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ. ಗಲಭೆ ನಡೆದ ಕೆಲವೇ ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಘಟನೆ ನಡೆದ ತಕ್ಷಣ ಅಂದರೆ, ಇಷ್ಟು ಬೇಗ ಕ್ರಮ ತೆಗೆದು ಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಆದರೆ, ಬಿಜೆಪಿಯ ಹಾಗೂ ಕೆಲವು ಜೆಡಿಎಸ್ ನಾಯಕರು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು. ಅದನ್ನು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡಬಾರದಿತ್ತು ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿಯ ಘಟನೆ ನಡೆದಿಲ್ಲ. ಹೊರಗಡೆಯಿಂದ ಬಂದು ಯಾರೋ ಗಲಭೆ ಮಾಡಿರಬಹುದು ಎಂಬ ಬಗ್ಗೆ ವಿಚಾರಣೆ ಮಾಡುತ್ತಿದ್ದೇವೆ. ಯಾವುದೇ ಸಮಾಜದವರಾಗಿದ್ದರೂ ಅವರ ಮೇಲೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್‌ನವರು ರಾಜಕೀಯವಾಗಿ ನಮನ್ನು ಎದುರಿಸಾಗದೆ ಪ್ರಚೋದನೆ ಮಾಡುತ್ತಿದ್ದಾರೆ. ನಾವು ಯಾರ ಓಲೈಕೆಯನ್ನೂ ಮಾಡುತ್ತಿಲ್ಲ. ಹಾಗಿದ್ದರೆ ಏಕೆ ಇಪ್ಪತ್ತೊಂದು ಜನರ ಬಂಧನ ಮಾಡುತ್ತಿದ್ದೆವು ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ನೋಡಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಹಿಸಲು ಆಗುತ್ತಿಲ್ಲ. ಸದನದಲ್ಲಿ ನಮನ್ನು ಎದುರಿಸಲು ಅವರಿಗೆ ಆಗೋದಿಲ್ಲ. ಹೀಗಾಗಿ ಇಂತಹ ಘಟನೆಗಳು ಆದಾಗ ಪ್ರಚೋದನೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು.