ಬೆಂಗಳೂರು,ಮೇ 2- ಸುಹಾಸ್ ಶೆಟ್ಟಿ ಅವರನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಸುಳಿವು ಸಿಕ್ಕಿದೆ.ಆದಷ್ಟು ಬೇಗ ಬಂಧಿಸುತ್ತೇವೆಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಹಿತೇಂದ್ರ ಅವರು ತಿಳಿಸಿದ್ದಾರೆ.
ಘಟನೆ ಬಳಿಕ ಮಂಗಳೂರಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಈ ಸಂಜೆಯೊಂದಿಗೆ ಮಾತನಾಡಿದ ಅವರು ಆರೋಪಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಾಲ್ಕು ವಿಶೇಷ ತಂಡ ರಚನೆ: ಆರೋಪಿಗಳ ಬಂಧನಕ್ಕಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದೇವೆ, ಈ ತಂಡಗಳು ಈಗಾಗಲೇ ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಸುತ್ತಿದ್ದು ಹಲವು ಮಾಹಿತಿಗಳನ್ನು ಕಲೆ ಹಾಕುತ್ತಿವೆ ಎಂದರು.
ಹಳೆ ದ್ವೇಶದಿಂದ ಈ ಕೊಲೆ ನಡೆದಿದೆ ಎಂಬುವುದು ಪ್ರಾಥಮಿಕ ತನಿಖೆಯಿಂದ ಕಂಡು ಬಂದಿದೆ. ಘಟನೆ ನಂತರ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೂಕ್ತ ಬಂದೋಬಸ್ತ್ ಮಾಡಿದ್ದೇವೆ ಎಂದರು.
ಐದು ಮಂದಿ ಎಸ್‌ಪಿಗಳು ಸೇರಿದಂತೆ ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳೀಯ ಪೊಲೀಸರ ಜೊತೆಗೆ ಇಪ್ಪತ್ತು ಕೆಎಸ್‌ಆರ್‌ಪಿ ತುಕಡಿಗಳು ಬಂದೋಬಸ್ತ್‌ನಲ್ಲಿವೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಅವರು ಹೇಳಿದರು.