ಬೆಂಗಳೂರು, ಮೇ 12-ರಾಜ್ಯದಲ್ಲಿ ಕಳೆದ ಒಂದು ವಾರದಿಂದ ದುರ್ಬಲಗೊಂಡಿದ್ದ ಪೂರ್ವ ಮುಂಗಾರು ಚೇತರಿಕೆ ಕಂಡಿದ್ದು, ವಾರಾಂತ್ಯವರೆಗೆ ಮಳೆಯಾಗುವ ಮುನ್ಸೂಚನೆಗಳಿವೆ. ನೈರುತ್ಯ ಮುಂಗಾರು ಆರಂಭಕ್ಕೂ ಮುಂಚಿನ ಪ್ರಕ್ರಿಯೆಗಳು ವಾತಾವರಣದಲ್ಲಿ ಉಂಟಾಗುತ್ತಿರುವುದು ಒಂದೆಡೆಯಾದರೆ, ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿರುವುದರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ವಾತಾವರಣದಲ್ಲಿ ಆಗಿರುವ ಕೆಲವು ಬದಲಾವಣೆಗಳಿಂದಾಗಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆ ಕೆಲವೆಡೆ ಬೀಳಲಿದೆ. ಇದೇ ಪರಿಸ್ಥಿತಿ ಇಂದಿನಿಂದ ಐದು ದಿನಗಳ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ.
ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ನಾಳೆಯಿಂದ ಹೆಚ್ಚಾಗಲಿದೆ. ಆದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಚದುರಿದಂತೆ ಅಲ್ಲಲ್ಲಿ ಮಳೆಯಾಗಲಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಹಾಸನ.. ಕೊಡಗು. ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದೆ. ಕೆಲವೆಡೆ ಸಾಧಾರಣ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಹಗುರ ಮಳೆಯಾಗಿದೆ.