ಬೆಂಗಳೂರು, ಮೇ 19-ನೈರುತ್ಯ ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಮಳೆ ಅಬ್ಬರಿಸಿ ಅರ್ಭಟಿಸುತ್ತಿದೆ. ಕಳೆದ ಎಂಟು ಹತ್ತು ದಿನಗಳಿಂದ ಚದುರಿದಂತೆ ಬೀಳುತ್ತಿದ್ದ ಮಳೆ ಕಳೆದ ಎರಡು ದಿನಗಳಿಂದ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಕೆಂಗೇರಿಯಲ್ಲಿ ಅತ್ಯಧಿಕ 132 ಮಿ.ಮೀ. ಭಾರಿ ಮಳೆಯಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಕೋಲಾರ, ಯಾದಗಿರಿ, ಮೈಸೂರು, ಮಂಡ್ಯ, ಬೆಳಗಾವಿ, ಧಾರವಾಡ, ವಿಜಯಪುರ, ಕೊಡಗು, ಚಿಕ್ಕಬಳ್ಳಾಪುರ, ಹಾಸನ ಸೇರಿದಂತೆ 15 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ.
ಕಲಬುರಗಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಸಾಧಾರಣ ವ್ಯಾಪಕ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಹಾವೇರಿ. ವಿಜಯನಗರ, ದಾವಣಗೆರೆ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ.
ಪೂರ್ವ ಮುಂಗಾರು ಮಳೆ ನಿರಂತರವಾಗಿ ಬೀಳುತ್ತಿರುವುದರಿಂದ ಬೇಸಿಗೆಯ ಬಿರು ಬಿಸಿಲು, ಸೆಕೆ ದೂರ ಸರಿದು ತಂಪಾದ ವಾತಾವರಣ ಕಂಡುಬರುತ್ತಿದೆ. ಹೀಗಾಗಿ ಬೇಸಿಗೆಯಲ್ಲೂ ಮಳೆಗಾಲದ ಅನುಭವವಾಗುತ್ತಿದೆ. ವಾತಾವರಣದಲ್ಲಿ ಆಗಿರುವ ಸಾಕಷ್ಟು ಬದಲಾವಣೆಗಳಿಂದ ಮುಂಗಾರು ಆರಂಭದ ಪ್ರಕ್ರಿಯೆಗಳು ಆರಂಭಗೊಂಡಿದ್ದು, ಮೋಡ ಹಾಗೂ ಮಳೆಯ ಸನ್ನಿವೇಶ ಸೃಷ್ಟಿಯಾಗಿದೆ.
ಇನ್ನೊಂದು ವಾರದಲ್ಲಿ ಮುಂಗಾರು ಮಳೆ ಪ್ರಾರಂಭವಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆದರೆ, ಈಗಾಗಲೇ ಮುಂಗಾರು ಮಳೆಯ ವಾತಾವರಣ ಕಂಡುಬರುತ್ತಿದ್ದು, ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. 15ರಿಂದ 20 ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ನಿನ್ನೆ ಹಾಗೂ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಗಾರು ಪೂರ್ವ ಮಳೆಗೆ ಕೆಲವೆಡೆ ಮರಗಳು ಉರುಳಿ ಬಿದ್ದಿದ್ದು, ವಿದ್ಯುತ್ ಸಂಪರ್ಕಕ್ಕೂ ಹಾನಿಯಾಗಿದೆ. ರಸ್ತೆ ಸಂಚಾರಕ್ಕೂ ತೊಂದರೆಯಾಗಿದೆ.
ಬಂಗಾಳದ ಉಪ ಸಾಗರದಲ್ಲಿ ಮೇಲೆ ಸುಳಿಗಾಳಿ, ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ವಾತಾವರಣದಲ್ಲಾಗಿರುವ ಈ ಬದಲಾವಣೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ಇದರಿಂದ ಗರಿಷ್ಠ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದೆ. ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚು ಹಾಗೂ ಗಂಟೆಗೆ 40-50 ಕಿ.ಮೀ.ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಅವರು ಹೇಳಿದ್ದಾರೆ.
ಅರಬ್ಬಿ ಸಮುದ್ರದಲ್ಲಿ ಮೇ 22ರ ವೇಳೆಗೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ನಾಲ್ಕು ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಪಾಟೀಲ್ ತಿಳಿಸಿದ್ದಾರೆ.
- ಸಸ್ಯಕಾಶಿ ಲಾಲ್ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ
- ಉತ್ತರ ಪ್ರದೇಶದ ಮಾಜಿ ಶಾಸಕರ ವಿರುದ್ಧ ಬೆಂಗಳೂರಲ್ಲಿ ರೇಪ್ ಕೇಸ್ ದಾಖಲು
- ಹೆಚ್ಚುತ್ತಿರುವ ಹೃದಯಾಘಾತಗಳ ಕುರಿತು ಜನ ಆತಂಕಕ್ಕೊಳಗಾಗಬಾರದು : ಶರಣಪ್ರಕಾಶ್ ಪಾಟೀಲ್
- ಅಧಿಕಾರಿಗಳ ತಪ್ಪಿನಿಂದ ತಿರಸ್ಕೃತವಾದ ಬಗರ್ಹುಕುಂ ಅರ್ಜಿ ಪರಿಶೀಲನೆ : ಸಚಿವ ಕೃಷ್ಣಭೈರೇಗೌಡ
- ದೆಹಲಿಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ