Friday, November 22, 2024
Homeರಾಜ್ಯ5, 8 , 9 ಹಾಗೂ 11ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶಕ್ಕೆ ಸುಪ್ರೀಂ ತಡೆಯಾಜ್ಞೆ

5, 8 , 9 ಹಾಗೂ 11ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶಕ್ಕೆ ಸುಪ್ರೀಂ ತಡೆಯಾಜ್ಞೆ

ನವದೆಹಲಿ,ಏ.8- ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಕಳೆದ ಮಾರ್ಚ್‍ನಲ್ಲಿ 5, 8 , 9 ಹಾಗೂ 11ನೇ ತರಗತಿಗಳಿಗೆ ನಡೆಸಿದ್ದ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಸದ್ಯ ಯಾವುದೇ ಶಾಲೆಗಳು ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೂ ಕಾಯಬೇಕು ಎಂದು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದೆ.

ಮಂಗಳವಾರ 5, 8, ಮತ್ತು 11ನೇ ತರಗತಿಯ ಫಲಿತಾಂಶವನ್ನು ಎದುರು ನೋಡುತ್ತಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸುಪ್ರೀಂಕೋರ್ಟ್‍ನ ಈ ಆದೇಶ ನಿರಾಸೆ ತಂದಿದೆ. 5, 8, 9 ಹಾಗೂ 11ನೇ ತರಗತಿಗಳಿಗೆ ನಡೆಸಲು ಉದ್ದೇಶಿಸಿದ್ದ ಬೋರ್ಡ್ ಪರೀಕ್ಷೆಗೆ, ಹೈಕೋರ್ಟ್‍ನ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ರಾಜೇಶ್.ಕೆ ರೈ ಅವರಿದ್ದ ಪೀಠ ಕೆಲವು ಷರತ್ತುಗಳನ್ನು ವಿಧಿಸಿ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು.

ಮಾರ್ಚ್‍ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿತ್ತು. ಅದರಂತೆ ಬಳಿಕ ಶಾಲೆಗಳು ಪರೀಕ್ಷೆಗಳನ್ನು ನಡೆಸಿದ್ದವು. ಇದೀಗ ಫಲಿತಾಂಶ ಪ್ರಕಟವಾಗುವ ಸಂದರ್ಭದಲ್ಲೇ ಸುಪ್ರೀಂಕೋರ್ಟ್ ತಡೆಯಾಜ್ಞೆ ಬಂದಿದೆ.

ಆದರೆ ದ್ವಿಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ರೂಪ್ಸಾ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಸೋಮವಾರ ಮೌಲ್ಯಾಂಕನ ಪರೀಕ್ಷೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೆ ಫಲಿತಾಂಶವನ್ನು ಪ್ರಕಟಿಸಬಾರದೆಂದು ಆದೇಶಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಅರ್ಜಿ ವಿಚಾರಣೆ ವೇಳೆ ರೂಪ್ಸಾ ಪರ ವಾದ ಮಂಡಿಸಿದ್ದ ವಕೀಲರು, 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅಕಾರವಿಲ್ಲ ಎಂದು ರೂಪ್ಸಾ ಪರ ವಕೀಲರು ವಾದ ಮಾಡಿದ್ದರು.

ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಯಡಿ ತಿಳಿಸಿರುವಂತೆ 6ರಿಂದ 14 ವರ್ಷದ ಮಕ್ಕಳಿಗೆ ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶವಿಲ್ಲ. ಆದರೂ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಕೈಗೊಂಡಿದೆ. ಕರ್ನಾಟಕ ಹೈಕೋರ್ಟ್ ದ್ವಿಸದಸ್ಯ ಪೀಠ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು. ಫಲಿತಾಂಶವನ್ನು ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.

ಅಲ್ಲದೆ ಮೌಲ್ಯಮಾಪನವನ್ನು ಬೇಕಾಬಿಟ್ಟಿಯಾಗಿ ನಡೆಸಲಾಗಿದೆ. ಉತ್ತಮವಾಗಿ ಓದಿದ ಅಭ್ಯರ್ಥಿಗಳಿಗೆ ಕಡಿಮೆ ಅಂಕ ನೀಡಲಾಗಿದೆ. ಮೌಲ್ಯ ಮಾಪನ ದೋಷದ ಬಗ್ಗೆ ಹಲವಾರು ಖಾಸಗಿ ಶಿಕ್ಷಣ ಸಂಸ್ಥೆಗಳೇ ಅನುಮಾನ ವ್ಯಕ್ತಪಡಿಸಿವೆ. ಇದು ಸಾಕಷ್ಟು ದೋಷಪೂರಿತವಾಗಿರುವುದರಿಂದ ತಡೆಯಾಜ್ಞೆ ನೀಡಬೇಕೆಂದು ವಕೀಲರು ಕೋರಿದರು. ಅಂತಿಮವಾಗಿ ವಾದ ಆಲಿಸಿದ ನ್ಯಾಯಮೂರ್ತಿಗಳು ಮಂಗಳವಾರ ಫಲಿತಾಂಶ ಪ್ರಕಟಿಸದಂತೆ ತಡೆಯಾಜ್ಞೆ ನೀಡಿತು.

ಹಿನ್ನಲೆ:
ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿದ್ದ ಬೋರ್ಡ್ ಪರೀಕ್ಷೆ ಹೈಕೋರ್ಟ್ ವಿಭಾಗೀಯ ಪೀಠ ಒಪ್ಪಿಗೆ ಸೂಚಿಸಿತ್ತು. ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠದ ಮೆಟ್ಟಲೇರಿತ್ತು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಬೋರ್ಡ್ ಪರೀಕ್ಷೆಗೆ ಅಸ್ತು ಎಂದಿತ್ತು. ಉಳಿದ ವಿಷಯಗಳ ಪರೀಕ್ಷೆ ನಡೆಸಲು ತುರ್ತು ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು.

ಈ ಮೊದಲು ರಾಜ್ಯದಲ್ಲಿ 5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವ ಪ್ರಯತ್ನದಲ್ಲಿದ್ದ ಶಿಕ್ಷಣ ಇಲಾಖೆಗೆ ಹಿನ್ನಡೆ ಆಗಿತ್ತು. 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್‍ನ ಏಕಸದಸ್ಯ ಪೀಠ ಮಾರ್ಚ್ 10ರಂದು ತೀರ್ಪು ನೀಡಿತ್ತು.

ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ತೀರ್ಮಾನಿಸಿ 2022ರ ಡಿಸೆಂಬರ್ 12ರಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಹಾಗೂ ಪೋಷಕರ ಸಂಘಟನೆ ಶಿಕ್ಷಣ ಇಲಾಖೆಯ ಸುತ್ತೋಲೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿತ್ತು.

ಈ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ. 2022-23ನೇ ಸಾಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಪ್ರಯತ್ನ ಕಾರ್ಯಸಾಧುವಲ್ಲ ಎಂದು ಸಂಘದ ಪರ ವಕೀಲರು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು.

ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ, ರಾಜ್ಯ ಶಿಕ್ಷಣ ಇಲಾಖೆ 2022ರ ಡಿಸೆಂಬರ್ 12ರಂದು ಪ್ರಕಟಿಸಿದ್ದ ಸುತ್ತೋಲೆಯನ್ನು ಅನೂರ್ಜಿತಗೊಳಿಸಿ, ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ತೀರ್ಪು ನೀಡಿತ್ತು. ಆದರೆ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆ ನಡೆಸಲು ಷರತ್ತುಬದ್ಧ ಒಪ್ಪಿಗೆ ಸೂಚಿಸಿತ್ತು.

RELATED ARTICLES

Latest News