ಬೆಂಗಳೂರು, ಸೆ.19- ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮತದಾರರ ಪಟ್ಟಿ ಪರಿಷ್ಕರಣೆ, ಜಾತಿ ಸಮೀಕ್ಷೆ, ಸ್ಥಳೀಯ ಸಂಸ್ಥೆಗಳ ಚುನಾವಣೆ, ಸಚಿವ ಸಂಪುಟ ಪುನರ್‌ರಚನೆಯಂತಹ ಸೂಕ್ಷ್ಮ ಸನ್ನೀವೇಶದಲ್ಲಿ ಸುರ್ಜೇವಾಲ ಅವರ ಮಧ್ಯಪ್ರವೇೕಶ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.
ಮತಗಳ್ಳತನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್ ಮುಂದಿನ ದಿನಗಳಲ್ಲಿ ಕೆಂದ್ರ ಚುನಾವಣಾ ಆಯೋಗದಿಂದ ರಾಜ್ಯದಲ್ಲಿ ನಡೆಯಬಹುದಾದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆ ಮೇಲೆ ನಿಗಾ ವಹಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ರಾಜ್ಯ ನಾಯಕರ ಜೊತೆ ಸಮಾಲೋಚನೆ ನಡೆಸಿದೆ.
ಪ್ರತಿಯೊಂದು ಬೂತ್ ಮಟ್ಟಕ್ಕೂ ಪಕ್ಷದಿಂದ ಏಜೆಂಟ್‌ರನ್ನು ನಿಯೋಜಿಸಬೇಕು. ಸ್ಥಳೀಯವಾಗಿ ಯಾರ ಹೆಸರನ್ನು ಸೇರಿಸಲಾಗುತ್ತಿದೆ ಹಾಗೂ ಕೈಬಿಡುತ್ತಿರುವವರ ಹೆಸರು ಯಾರವು? ಎಂಬ ಬಗ್ಗೆ ಜಾಗೃತರಾಗಿರಬೇಕು. ಉಳಿದಂತೆ ಬಿಜೆಪಿಯವರು ಆಯೋಗದ ಮೇಲೆ ಪ್ರಭಾವ ಬೀರಿ ಬೇರೆ ರೀತಿಯ ತಂತ್ರಗಾರಿಕೆಗಳನ್ನು ಅನುಸರಿಸಬಹುದು ಎಂಬ ಅನುಮಾನಗಳಿದ್ದು, ಪ್ರತಿ ಹಂತದಲ್ಲೂ ಎಚ್ಚರಿಕೆ ವಹಿಸಬೇಕು ಎಂದು ಸುರ್ಜೇವಾಲ ಸೂಚನೆ ನೀಡಿದ್ದಾರೆ.
ನಗರ ಹಾಗೂ ಗ್ರಾಮೀಣಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗ ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸುತ್ತದೆ. ಇದರ ಜೊತೆಗೆ ಕೇಂದ್ರ ಚುನಾವಣಾ ಆಯೋಗ ಬಿಹಾರ ಮಾದರಿಯಲ್ಲಿ ರಾಜ್ಯದಲ್ಲೂ ಮತದಾರರ ಪಟ್ಟಿ ಪರಿಷ್ಕರಿಸಲು ಮುಂದಾಗಿದೆ. ಈ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಾಗಬಾರದು ಮತ್ತು ಲೋಪಗಳಿಲ್ಲದಂತೆ ಎಚ್ಚರಿಕೆ ವಹಿಸುವಂತೆ ಚರ್ಚೆಗಳಾಗಿವೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಕರ್ನಾಟಕದ ಮಹದೇವಪುರ ಹಾಗೂ ಅಳಂದ ವಿಧಾನಸಭಾ ಕ್ಷೇತ್ರದ ಮತಗಳ್ಳತನ ಬಗ್ಗೆ ರಾಷ್ಟ್ರಮಟ್ಟದಲ್ಲಿ ಧ್ವನಿ ಎತ್ತಿದ್ದಾರೆ. ಈ ವಿಚಾರವನ್ನು ರಾಜ್ಯ ನಾಯಕರು ಮತ್ತಷ್ಟು ತೀವ್ರ ಸ್ವರೂಪಕ್ಕೆ ತೆಗೆದುಕೊಂಡು ಹೋಗಬೇಕು. ಹೋರಾಟದ ಮೂಲಕ ಚುನಾವಣಾ ಆಯೋಗದ ಮೇಲೆ ಒತ್ತಡ ತಂದು ತನಿಖೆಗೆ ಅಗತ್ಯ ಸಹಕಾರ ನೀಡಲು ಪ್ರೇರೇಪಿಸಬೇಕೆಂದು ಸುರ್ಜೇವಾಲ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಪಕ್ಷದ ನಿಷ್ಠಾವಂತರಿಗೆ ಆಧ್ಯತೆ ನೀಡುವಂತೆ ತಾಕೀತು ಮಾಡಲಾಗಿದೆ.
ಸಚಿವ ಸಂಪುಟ ವಿಸ್ತರಣೆಯ ಬಗ್ಗೆಯೂ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ಸಕಾಲಿಕ ನಿರ್ಧಾರ ತೆಗೆದುಕೊಳ್ಳಬೇಕು. ಆದರೆ ಆ ಸಂದರ್ಭದಲ್ಲಿ ಹೈಕಮಾಂಡ್ ಜೊತೆ ಸಮಾಲೋಚಿಸ ಬೇಕೆಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.ನಿಗಮ ಮಂಡಳಿಯ ನೇಮಕಾತಿಗೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕೆಂದು ಸುರ್ಜೇವಾಲ ಹೇಳಿದ್ದು ಈ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.