ಬೆಂಗಳೂರು,ಜ.29- ಬೀದರ್ ಜಿಲ್ಲೆ ಹುಮ್ನಾಬಾದ್ ತಾಲ್ಲೂಕಿನ ಕರ್ತವ್ಯನಿರತ ತಹಸೀಲ್ದಾರ್ ಡಾ.ಪ್ರದೀಪ್‍ಕುಮಾರ್ ಹಿರೇಮಠ ಅವರ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಸಚಿವಾಲಯದ ನೌಕರರ ಸಂಘ ಒತ್ತಾಯಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕರ್ನಾಟಕ ಸರ್ಕಾರ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಪಿ.ಗುರುಸ್ವಾಮಿ ಅವರು ನಿನ್ನೆ ಕರ್ತವ್ಯನಿರತ ತಹಸೀಲ್ದಾರ್ ಮೇಲೆ ಕೆಲವು ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಇವರ ಮೇಲೆ ಎಫ್‍ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.
ತಹಸೀಲ್ದಾರ್ ಮೇಲೆ ನಡೆಸಿರುವ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಸಚಿವಾಲಯದ ನೌಕರರ ಸಂಘ, ರಾಜ್ಯದಲ್ಲಿ ಪದೇ ಪದೇ ಸರ್ಕಾರಿ ಅಧಿಕಾರಿ ಮತ್ತು ನೌಕರರ ಮೇಲೆ ಹಲ್ಲೆ ಮತ್ತು ದೌರ್ಜನ್ಯ ನಡೆಯುತ್ತಿದೆ. ಯಾರೇ ಈ ಕೃತ್ಯ ನಡೆಸಿದರೂ ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನನಡಿ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಮತ್ತು ಅಧಿಕಾರಿಗಳಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಈ ನಿರ್ಲಕ್ಷ್ಯ ಧೋರಣೆಯನ್ನು ಸಹಿಸುವುದಿಲ್ಲ. ತಕ್ಷಣವೇ ಸರ್ಕಾರ ಹುಮ್ನಾಬಾದ್ ತಹಸೀಲ್ದಾರ್ ಡಾ.ಪ್ರದೀಪ್‍ಕುಮಾರ್ ಹಿರೇಮಠ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲೂ ಕರ್ತವ್ಯನಿರತ ನೌಕರರ ಮೇಲೆ ಹಲ್ಲೆ ನಡೆಸಿದರೆ ಅಂಥವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ಸರ್ಕಾರ ವಿಶೇಷ ಕಾಯ್ದೆಯನ್ನು ರಚಿಸಬೇಕೆಂದು ಒತ್ತಾಯಿಸಿದ್ದಾರೆ.
