ಬೆಂಗಳೂರು, ಜು.16- ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಸಂಗ್ರಹಿಸಿಕೊಂಡು ಮಾರಾಟದಲ್ಲಿ ತೊಡಗಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ 90 ಲಕ್ಷ ಮೌಲ್ಯದ ಹ್ಯಾಶಿಶ್ ಆಯಿಲ್, ಹಾಗೂ
ಗಾಂಜಾ ವಶಪಡಿಸಿಕೊಂಡಿದ್ದಾರೆ.
ಸೀತಾ, ಸುಮಿತ್ರಾ ಮತ್ತು ಚಂದ್ರಶೇಖರ್ ಬಂತ ಆರೋಪಿಗಳು. ಈ ಮೂವರು ಆರೋಪಿಗಳು ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ತುನಿ ಗ್ರಾಮಕ್ಕೆ ಹೋಗಿ ಅಲ್ಲಿರುವ ಪರಿಚಯಸ್ಥ ವ್ಯಕ್ತಿಯಿಂದ ಮಾದಕ ವಸ್ತುಗಳನ್ನು ಖರೀದಿಸಿದ್ದಾರೆ.
ನಂತರ ಅವುಗಳನ್ನು ಮಹಿಳಾ ಆರೋಪಿಯ ಮನೆಯಲ್ಲಿ ಸಂಗ್ರಹಿಸಿಟ್ಟು ನಗರದಲ್ಲಿ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದಾಗ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರೋಪಿಗಳಿಂದ ಸುಮಾರು 90 ಲಕ್ಷ ಬೆಲೆ ಬಾಳುವ ಮಾದಕವಸ್ತುಗಳಾದ 940 ಗ್ರಾಂ ತೂಕದ ಹ್ಯಾಶಿಶ್ ಆಯಿಲ್, 10 ಕೆಜಿ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ 2 ಮೊಬೈಲ್, ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳ ಪೈಕಿ ಒಬ್ಬ ಈ ಹಿಂದೆ ಅಬಕಾರಿ ಇಲಾಖೆಯ ಎನ್‍ಡಿಪಿಎಸ್ ಪ್ರಕರಣದಲ್ಲಿ ಬಂಧಿತನಾಗಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಮಾದಕ ವಸ್ತುಗಳ ಮಾರಾಟ/ಸಾಗಾಟ ಮಾಡಿರುವುದು ತಿಳಿದುಬಂದಿದ್ದು, ಇವರ ವಿರುದ್ಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಈ ಕಾರ್ಯಾಚರಣೆಯನ್ನು ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಕಾರಿ ಮತ್ತು ಸಿಬ್ಬಂದಿ ತಂಡವು ಯಶಸ್ವಿಯಾಗಿ ಕೈಗೊಂಡಿದೆ.