ರಾಜ್ಯದ ದಕ್ಷಿಣ ಒಳನಾಡಿನಲ್ಲಿ 3 ದಿನ ಮಳೆ

Social Share

ಬೆಂಗಳೂರು, ಅ.30- ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಕಳೆದ ಎರಡು ದಿನಗಳಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ.ಇನ್ನೂ ಮೂರು ದಿನಗಳ ಕಾಲ ಇದೇ ರೀತಿ ಸಾಧಾರಣ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಆದರೆ, ಭಾರೀ ಮಳೆಯಾಗುವ ಸಾಧ್ಯತೆಗಳು ತೀರ ವಿರಳ.

ನಿನ್ನೆ ಮಧ್ಯಾಹ್ನದಿಂದಲೇ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ನಿನ್ನೆ ಸಂಜೆ ಹಾಗೂ ರಾತ್ರಿ ರಾಜಧಾನಿ ಬೆಂಗಳೂರು, ಕೋಲಾರ, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆಯಾಗಿದೆ.

ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾದ ವರದಿಯಾಗಿದೆ. ಆದರೆ, ಎಲ್ಲೂ ಕೂಡ ಭಾರೀ ಮಳೆಯಾದ ವರದಿಯಾಗಿಲ್ಲ. ಬಂಗಾಳಕೊಲ್ಲಿಯ ತಮಿಳುನಾಡು, ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಮೇಲೂ ಅದರ ಪರಿಣಾಮ ಉಂಟಾಗಲಿದೆ. ಹೀಗಾಗಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಆಗಾಗ್ಗೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಕರ್ನಾಟಕದಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿ..?

ಇನ್ನೂ ಮೂರು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಹವಾಮಾನ ಮುನ್ಸೂಚನೆ ಪ್ರಕಾರ, ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

ಪಾದಯಾತ್ರೆಯಲ್ಲಿ ಇದ್ದಕ್ಕಿದ್ದಂತೆ ಓಡಿದ ರಾಹುಲ್, ಭದ್ರತಾ ಸಿಬ್ಬಂದಿ ಕಕ್ಕಾಬಿಕ್ಕಿ

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸೂಚನೆಗಳಿವೆ. ಮಲೆನಾಡು ಭಾಗದ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕೆಲವೆಡೆ ವ್ಯಾಪಕ, ಮತ್ತೆ ಕೆಲವೆಡೆ ಮಧ್ಯಮ ಪ್ರಮಾಣದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Articles You Might Like

Share This Article