ಬೆಂಗಳೂರು, ಏ.2- ಮಾರ್ಚ್ ಕೊನೆಯ ವಾರದಿಂದ ರಾಜ್ಯದಲ್ಲಿ ಚದುರಿದಂತೆ ಮಳೆಯಾಗುತ್ತಿದ್ದು, ಮಳೆ ಪ್ರಮಾಣ ಹೆಚ್ಚಾಗಲಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಮೇಲೆ., ಸುಳಿಗಾಳಿ ಉಂಟಾಗಿದ್ದು, ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ರುತ್ತಿದೆ. ಮಲೆನಾಡು ಸೇರಿದಂತೆ ರಾಜ್ಯದ ಕೆಲವೆಡೆ ಚದುರಿದಂತೆ ಮಳೆಯಾಗುತ್ತಿದೆ. ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ವ್ಯಾಪಕ ಹಾಗೂ ಭಾಗಶಃ ವ್ಯಾಪಕ ಮಳೆಯಾಗುವ ಲಕ್ಷಣಗಳಿವೆ.
ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ನೀಡಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನಿನ್ನೆ ರಾಜ್ಯದ 12 ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಿದ್ದರೆ, 19 ಜಿಲ್ಲೆಗಳಲ್ಲಿ ಅತ್ಯಲ್ಪ ಪ್ರಮಾಣದ ಮಳೆಯಾಗಿದೆ. ಮೈಸೂರು, ಮಂಡ್ಯ, ಹಾಸನ, ಉಡುಪಿ, ಬೆಳಗಾವಿ, ತುಮಕೂರು, ಶಿವಮೊಗ್ಗ, ಕೊಡಗು, ಯಾದಗಿರಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೆಡೆ ಬಿರುಗಾಳಿ, ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.
ಏ.4ರಿಂದ ಏ.6ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳು ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.