ಚಿತ್ರದುರ್ಗ,ಮೇ.1 -ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ಇನ್ನೋವಾ ಕಾರಿನ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರೆಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಮೂವರು ಸಾವನಪ್ಪದ್ದು, 6 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಕಾತ್ರಾಳ್ ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಮೃತರನ್ನು ತಮಿಳುನಾಡಿನ ಅರ್ಜುನ್ (28), ಶರವಣ (31), ಸೇಂದಿಲ್ (29) ಎಂದು ಗುರುತಿಸಲಾಗಿದೆ. ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಇಂದು ಬೆಳಿಗ್ಗೆ 6.30 ರ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.
ಡಿಕ್ಕಿಯ ರಭಸಕ್ಕೆ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಅಪಘಾತದಲ್ಲಿ ಗಾಯಗೊಂಡಿರುವ ಮೂವರನ್ನು ಬೆಂಗಳೂರಿನ ಆಸ್ಪತ್ರೆಗೂ, ಉಳಿದ ಮೂವರನ್ನು ಚಿತ್ರದುರ್ಗ ಆಸ್ಪತೆಗೂ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಕಾರಿನ ಎಡ ಭಾಗದ ಚಕ್ರದ ಟೈರ್ ಸ್ಪೋಟಗೊಂಡಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ .ಸುದ್ದಿ ತಿಳಿದ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.