ಹಿರಿಯೂರಿನ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರ ದುರ್ಮರಣ

Social Share

ಚಿತ್ರದುರ್ಗ,ಫೆ.8- ಕಾರಿನಲ್ಲಿ ಮದುವೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಹಿರಿಯೂರಿನ ಬಿರೇನಹಳ್ಳಿ ಸಮೀಪ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದೆ.
ಮೃತಪಟ್ಟವರನ್ನು ಸುದೀಕ್ಷ(17), ರೇಣುಕಾದೇವಿ(39), ವಿಶಾಲಕ್ಷಿ(70) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪ್ರತೀಕ್ಷಾ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಹಿರಿಯೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರೆಲ್ಲರೂ ಭದ್ರಾವತಿಯಿಂದ ಬೆಂಗಳೂರಿಗೆ ಮದುವೆಗೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಅತಿವೇಗ ಮತ್ತು ಅಜಾಗರೂಕತೆಯೇ ಘಟನೆ ಕಾರಣ ಎನ್ನಲಾಗಿದೆ. ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿದ ಹಿರಿಯೂರು ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸಿದ್ದಾರೆ.
ಶ್ರೀರಂಗಾಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ನಿನ್ನೆಯಷ್ಟೇ ಮೃತಪಟ್ಟ ಘಟನೆ ಮಾಸುವ ಮುನ್ನವೇ ಇಂದು ಮತ್ತೊಂದು ದುರಂತ ಸಂಭವಿಸಿದೆ.

Articles You Might Like

Share This Article