ಮೂವರು ಸರಗಳ್ಳರ ಬಂಧನ : 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶ

Social Share

ಬೆಂಗಳೂರು,ಮಾ.8- ನಡೆದು ಹೋಗುತ್ತಿದ್ದ ಮಹಿಳೆಯನ್ನು ಬೈಕ್‍ನಲ್ಲಿ ಹಿಂಬಾಲಿಸಿ ಮಾಂಗಲ್ಯಸರ ಎಗರಿಸಿದ್ದ ಮೂವರು ಸರಗಳ್ಳರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಎರಡು ದ್ವಿಚಕ್ರವಾಹನ ವಶಪಡಿಸಿಕೊಂಡಿದ್ದಾರೆ.
ಫೆ.28ರಂದು ಸಂಜೆ 6.15ರ ಸುಮಾರಿನಲ್ಲಿ ಮಹಿಳೆಯೊಬ್ಬರು ಜ್ಞಾನಭಾರತಿ ಠಾಣೆ ವ್ಯಾಪ್ತಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ದ್ವಿಚಕ್ರ ವಾಹನದಲ್ಲಿ ಇಬ್ಬರು ಸರಗಳ್ಳರು ಹಿಂಬಾಲಿಸಿಕೊಂಡು ಹೋಗಿ ಅವರ ಕೊರಳಲ್ಲಿದ್ದ 3.50 ಲಕ್ಷ ರೂ. ಬೆಲೆಯ 70 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು.
ಈ ಬಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‍ಸ್ಪೆಕ್ಟರ್ ಲಕ್ಷ್ಮಣ್ ನಾಯಕ್ ಹಾಗೂ ಸಿಬ್ಬಂದಿ ಘಟನಾ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿ ಮೊದಲು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಂತರ ಈ ಆರೋಪಿಗಳನ್ನು ವಿಚಾರಣೆಗೊಳಪಡಿಸಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಗಳು ಜ್ಞಾನಭಾರತಿ, ಕೆಂಗೇರಿ ಮತ್ತು ಅನ್ನಪೂಣೇಶ್ವರಿನಗರಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಸರ ಅಪಹರಣ ಮತ್ತು ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಆರೋಪಿಗಳಿಂದ ಒಟ್ಟು 8 ಲಕ್ಷ ರೂ. ಬೆಲೆಯ 204 ಗ್ರಾಂ ತೂಕದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಪೆಪೊಲೀಸರು ಯಶಸ್ವಿಯಾಗಿದ್ದಾರೆ.

Articles You Might Like

Share This Article