ಟಿಪ್ಪು ಜಯಂತಿಯಿಂದ ಸಿಎಂ ಕುಮಾರಸ್ವಾಮಿ ದೂರ ದೂರ..!

tippu
ಬೆಂಗಳೂರು. ನ. 09 : ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟಿಪ್ಪು ಜಯಂತಿ ಕುರಿತ ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮದಿಂದ ದೂರ ಉಳಿಯುವ ಸಾಧ್ಯತೆ ಇದೆ. ನಾಳೆ (ನ.10)ವಿಧಾನಸೌಧದಲ್ಲಿ ಆಯೋಜಿಸಿರುವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೆಸರು ಪ್ರಕಟಿಸಲಾಗಿಲ್ಲ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅವರಿಬ್ಬರೂ ಗೈರು ಹಾಜರಾಗಲಿದ್ದಾರೆ.

ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಹ್ವಾನ ಪತ್ರಿಕೆ ಬಿಡುಗಡೆಯಾಗಿದ್ದು, ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ನಡೆಯುವ ಸಮಾರಂಭವನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಉದ್ಘಾಟಿಸಲಿದ್ದಾರೆ. ಇದುವರೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿಯಿತ್ತು. ಆದರೆ, ಕುಮಾರಸ್ವಾಮಿ ಅವರು ಈ ಸಮಾರಂಭದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.  ಹಾಗೆ ನೋಡಿದರೆ ಕುಮಾರಸ್ವಾಮಿ ಅವರ ಶನಿವಾರದ ಬೇರೆ ಯಾವುದೇ ಕಾರ್ಯಕ್ರಮ ಇದುವರೆಗೆ ನಿಗದಿಯಾಗಿಲ್ಲ. ಶುಕ್ರವಾರ ಮತ್ತು ಶನಿವಾರ ಎರಡೂ ದಿನಗಳ ಕಾಲ ಮುಖ್ಯಮಂತ್ರಿಗಳು ಬೆಂಗಳೂರಿನ ಹೊರತುಪಡಿಸಿ ಬೇರೊಂದು ಸ್ಥಳದಲ್ಲಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ದೀಪಾವಳಿ ಹಬ್ಬದ ಪ್ರಯುಕ್ತ ಕಳೆದ ಮೂರು ದಿನಗಳ ಕಾಲ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಯಾವ ಅಧಿಕೃತ ಕಾರ್ಯಕ್ರಮಗಳೂ ಇರಲಿಲ್ಲ. ಒಂದು ರೀತಿಯಲ್ಲಿ ವಿಶ್ರಾಂತಿಯಂತೆಯೇ ಇತ್ತು. ಆದರೆ, ಶುಕ್ರವಾರ ಮತ್ತು ಶನಿವಾರವೂ ಯಾವುದೇ ಕಾರ್ಯಕ್ರಮಗಳನ್ನು ನಿಗದಿಗೊಳಿಸದೆ ವಿಶ್ರಾಂತಿ ತೆಗೆದುಕೊಳ್ಳಲು ನಿರ್ಧರಿಸಿರುವುದು ಟಿಪ್ಪು ಜಯಂತಿ ಆಚರಣೆಯಿಂದ ದೂರ ಉಳಿಯುವುದಕ್ಕಾಗಿಯೇ ಎಂಬ ಅನುಮಾನ ಮೂಡಿದೆ.

ಟಿಪ್ಪು ಜಯಂತಿ ಆಚರಣೆ ವಿರುದ್ಧ ಪ್ರತಿಪಕ್ಷ ಬಿಜೆಪಿಯು ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ಬೆಂಗಳೂರು ಸೇರಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪಕ್ಷದ ವತಿಯಿಂದ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ತಿಳಿಸಿದ್ದಾರೆ. ಮುಖ್ಯ ಪ್ರತಿಭಟನೆ ಬೆಂಗಳೂರಿನಲ್ಲಿ ಬೆಳಗ್ಗೆ 11 ಗಂಟೆಗೆ ಕೆಂಪೇಗೌಡ ರಸ್ತೆಯ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪಕ್ಷದ ಮುಖಂಡ ಆರ್‌.ಅಶೋಕ್‌, ಸಂಸದ ಪಿ.ಸಿ.ಮೋಹನ್‌ ಮತ್ತಿತರರ ನೇತೃತ್ವದಲ್ಲಿ ನಡೆಯಲಿದೆ. ನಗರದ ಶಾಸಕರು, ಬಿಬಿಎಂಪಿ ಸದಸ್ಯರು ಹಾಗೂ ಮುಖಂಡರು ಇದರಲ್ಲಿ ಭಾಗವಹಿಸಲಿದ್ದಾರೆ.

Comments are closed.